ತುಮಕೂರು: ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಶ್ರೀ ರಾಮಕೃಷ್ಣ ಸೇವಾಶ್ರಮದ ಸಹಯೋಗದಲ್ಲಿ ಜನವರಿ 12ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಪಾವಗಡದ ಎಸ್‌ಎಸ್‌ಕೆ ಬಯಲು ರಂಗ ಮಂದಿರದಲ್ಲಿ ಸ್ವಾಮಿ ವಿವೇಕಾನಂದ ಜನ್ಮೋತ್ಸವ (ರಾಷ್ಟ್ರೀಯ ಯುವ ದಿನಾಚರಣೆ) (National Youth Day) ಹಮ್ಮಿಕೊಳ್ಳಲಾಗಿದೆ.
ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಮಹಾರಾಜ್ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಶ್ರೀ ರಾಮಕೃಷ್ಣ ಸೇವಾಶ್ರಮ ಮತ್ತು ಸಹ ಸಂಸ್ಥೆಗಳ ಸಲಹಾ ಸಮಿತಿ ಅಧ್ಯಕ್ಷ ಎಚ್. ಬಿಲ್ಲಪ್ಪ, ಪಾವಗಡ ಶಾಸಕ ಎಚ್.ವಿ. ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು.ಜಿ., ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಹಾಗೂ ಹಿರಿಯ ವೈದ್ಯ ಶ್ರೀ ಡಾ. ಜಿ. ವೆಂಕಟರಾಮಯ್ಯ, ಎಸ್‌ಎಸ್‌ಕೆ ಸಂಘದ ಅಧ್ಯಕ್ಷ ಆನಂದರಾವ್, ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಎಕ್ಸಿಕ್ಯುಟಿವ್ ಡೈರೆಕ್ಟರ್ ಕಿರಣ್ ಕುಮಾರ್ ಡಿ.ಕೆ. ಅವರು ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮ
ಪಾವಗಡದ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ವಿದ್ಯಾಲಯದ ವಿದ್ಯಾರ್ಥಿನಿಯರು ಮತ್ತು ಶ್ರೀಶಾಲಾ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಶ್ರೀ ರಾಮಕೃಷ್ಣ ಸೇವಾಶ್ರಮದ ವತಿಯಿಂದ ಸ್ವಾಮಿ ವಿವೇಕಾನಂದರ ಉಪದೇಶಗಳಿರುವ ಪುಸ್ತಕವನ್ನು ಉಚಿತವಾಗಿ ನೀಡಲಾಗುತ್ತದೆ.
ಬೆಳಗ್ಗೆ 10.30 ರಿಂದ 11 ಗಂಟೆಯವರೆಗೆ ಸ್ವಾಮಿ ವಿವೇಕಾನಂದರ ಸ್ಫೂರ್ತಿ ವಾಣಿ ಕಾರ್ಯಕ್ರಮ (ಸ್ವಾಮಿ ವಿವೇಕಾನಂದರು ಹಾಗೂ ಯುವ ಜನತೆಗಾಗಿ ಸ್ಫೂರ್ತಿಭರಿತ ಗೀತೆಗಳು) ನಡೆಯಲಿದೆ. ಶ್ರೀ ರಾಮಕೃಷ್ಣ ಸೇವಾಶ್ರಮದ ವೃಂದದವರು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಇದನ್ನೂ ಓದಿ | Raja Marga Column : ರಾಮನ ಕಥೆ ಕಾಲ್ಪನಿಕ ಅಲ್ವೇ ಅಲ್ಲ, ಅಯೋಧ್ಯೆಯಲ್ಲಿದೆ ನೂರಾರು ಸಾಕ್ಷಿ!
ಕಾರ್ಯಕ್ರಮಕ್ಕೆ ಪಾವಗಡ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಿ.ಬಸವಲಿಂಗಪ್ಪ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಮಾರಪ್ಪ, ಶಾಂತಿ ಎಸ್.ಎಸ್.ಕೆ. ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ವಿನಯ್ ಬಾಬು, ಶಾಂತಿ ಎಸ್.ಎಸ್.ಕೆ. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಂ.ಜಿ.ಮನೋಜ್ ಕುಮಾರ್, ಸ್ವಾಮಿ ವಿವೇಕಾನಂದ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್, ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನಾಗೇಂದ್ರ ಅವರು ಸಹಕಾರ ನೀಡಿದ್ದಾರೆ.