ಬೆಂಗಳೂರು: ಸ್ವಾಮಿ ವಿವೇಕಾನಂದರ 160ನೇ ಜನ್ಮ ದಿನಾಚರಣೆ (Vivekananda Jayanti 2023) ಅಂಗವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನಿಮ್ಮ ನೆಚ್ಚಿನ ಸುದ್ದಿ ಸಂಸ್ಥೆ ವಿಸ್ತಾರ ನ್ಯೂಸ್ ಶುಕ್ರವಾರ ಏರ್ಪಡಿಸಿರುವ “ವಿವೇಕ ವಂದನೆʼʼ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.
ಜನವರಿ 13ರಂದು ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಗರದ ವಿವಿಧ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಜನರು ಭಾಗವಹಿಸಲಿದ್ದಾರೆ. ಬೆಂಗಳೂರಿನ ವಿವೇಕಯುಗ ಫೌಂಡೇಷನ್ ಈ ಕಾರ್ಯಕ್ರಮಕ್ಕೆ ಸಾಥ್ ನೀಡಿದೆ.
ಬೆಳಗ್ಗೆ 8.30ಕ್ಕೆ ಆರಂಭವಾಗಲಿರುವ ಈ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಪ್ರೇರಣೆ ಕುರಿತು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಲಿದ್ದಾರೆ. ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತೀ ಅವರು ವಿವೇಕ ಶಪಥ ಬೋಧನೆ ಮಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ ಸಿ ನಾಗೇಶ್, ಕಂದಾಯ ಸಚಿವ ಆರ್. ಅಶೋಕ್, ಸಂಸದ ಪಿ.ಸಿ.ಮೋಹನ್, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಆರ್. ವಿಶಾಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ. ಪಿ.ಎಸ್. ಹರ್ಷ, ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾದ ಬಿ.ಬಿ. ಕಾವೇರಿ, ಖ್ಯಾತ ನಟಿ ಪ್ರಣೀತಾ ಸುಭಾಷ್ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಖ್ಯಾತ ಗಾಯಕಿ ಭವಾನಿ ಹೆಗಡೆ ಹಾಗೂ ಖ್ಯಾತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಮತ್ತು ತಂಡದವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನ ಪರಿಶ್ರಮ ನೀಟ್ ಅಕಾಡೆಮಿ, ಕೆಎಂಎಫ್, ಎಎಂಸಿ ಎಜುಕೇಷನ್, ಕ್ಯಾಮ್ಸ್ ಕರ್ನಾಟಕ ಮತ್ತು ಎನ್‌ಎಸ್‌ಎಸ್ ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿವೆ.
ಸ್ವಾಮಿ ವಿವೇಕಾನಂದರ 160 ನೇ ಜನ್ಮದಿನಾಚರಣೆಯನ್ನು ಆಚರಿಸುವ ಸಲುವಾಗಿ ವಿಶೇಷವಾಗಿ ಏರ್ಪಡಿಸಲಾಗಿರುವ ಈ ಕಾರ್ಯಕ್ರಮದಲ್ಲಿ ಯುವಜನತೆ ಮತ್ತು ಆಸಕ್ತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿಸ್ತಾರ ಮೀಡಿಯಾದ ಸಿಇಒ ಹಾಗೂ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ, ಚೇರ್ಮನ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ವಿ. ಧರ್ಮೇಶ್, ನಿರ್ದೇಶಕ ಶ್ರೀನಿವಾಸ್ ಎಸ್. ಹೆಬ್ಬಾರ್ ಅವರು ಕೋರಿದ್ದಾರೆ.
ಇದನ್ನೂ ಓದಿ | Swami Vivekananda | ಜಗತ್ತಿನ ಕಣ್ಣು ತೆರೆಸಿದ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ