Site icon Vistara News

Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

wayanad landslide cm siddaramaiah pinarayi vijayan

ಬೆಂಗಳೂರು: ವಯನಾಡ್‌ ಭೂಕುಸಿತ (Wayanad landslide, Kerala landslide) ಸಂತ್ರಸ್ತರಿಗೆ 100 ಮನೆ ನಿರ್ಮಾಣ ಮಾಡಿಕೊಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ (Pinarayi Vijayan) ಅವರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಹೇಳಿಕೆ ನೀಡಿದ್ದಾರೆ.

“ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ” ಎಂದು ಸಿಎಂ ಟ್ವೀಟ್‌ ಮಾಡಿದ್ದಾರೆ.

ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ಧೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಲಾಗಿದೆ. ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ ತಿಳಿಯಲಿದೆ. ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು. ಭೂಕುಸಿತದಿಂದ ಸಂಕಷ್ಟದಲ್ಲಿರುವ ಕನ್ನಡಿಗರ ನೆರವಿಗೆ ಧಾವಿಸಲು ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗಿತ್ತು. ಗಡಿ ಜಿಲ್ಲೆ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿತ್ತು. ಹೆಚ್.ಡಿ ಕೋಟೆಯಲ್ಲಿ ಗಾಯಾಳುಗಳನ್ನು ಕರೆತಂದು ಅಗತ್ಯ ಚಿಕಿತ್ಸೆ ಕೊಡಿಸಲು ಬಸ್‌ಗಳನ್ನು ಏರ್ಪಡಿಸಲಾಗಿತ್ತು. ಅಗತ್ಯ ಸಲಕರಣೆಗಳನ್ನು ಹೊತ್ತ ಬೆಂಗಳೂರಿನ ಎನ್.ಡಿ.ಆರ್.ಎಫ್ ಹಾಗೂ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಸೇನಾಪಡೆಯ ತಂಡಗಳು ವಯನಾಡು ತಲುಪಿದ್ದವು.

ವಯನಾಡು ದುರಂತವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಕರ್ನಾಟಕದ ಯಾವುದೇ ಮೂಲೆಯಲ್ಲಿ ಪ್ರವಾಹ, ಭೂಕುಸಿತ ಅಥವಾ ಇತರೇ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದರೆ ಅದನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರಲು ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನಿನ್ನೆ ಮುಖ್ಯಮಂತ್ರಿಗಳು ಕೊಡಗಿನಲ್ಲಿ ಭೂಕುಸಿತ ಸಂಭವಿಸಿದ ಜಾಗಕ್ಕೆ ಭೇಟಿ ನೀಡಿದ್ದರು.

“ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು” ಎಂದು ಭೇಟಿಯ ಬಳಿಕ ಹೇಳಿದ್ದರು. “ಜಿಲ್ಲೆಯಲ್ಲಿ 20 ಕಡೆ ಭೂ ಕುಸಿತ ಆಗಿದೆ, ಬಹುತೇಕ ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ.‌ 67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ. ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.‌ ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ. ಈಗಾಗಲೇ ಸಂತ್ರಸ್ಥರ ಖಾತೆಗೆ ಹಣ ವರ್ಗಾವಣೆ ಆಗಿದೆ. 16 ಜಾನುವಾರು ಸತ್ತಿವೆ. ತಲಾ 35 ಸಾವಿರ ಪರಿಹಾರ ನೀಡಿದ್ದೇನೆ. 14 ಪರಿಹಾರ ಕ್ಯಾಂಪ್ ಗಳನ್ನು ತೆರೆಯಲಾಗಿದೆ. 10 ಕ್ಯಾಂಪ್ ಗಳಲ್ಲಿ 186 ಮಂದಿ ಇದ್ದಾರೆ. ತೋರಾ ಕ್ಯಾಂಪ್ ನಲ್ಲಿ ಇರುವವರ ಜೊತೆ ನಾನೇ ನೇರವಾಗಿ ಮಾತನಾಡಿದ್ದೇನೆ” ಎಂದು ಸಿಎಂ ಹೇಳಿದ್ದಾರೆ.

“28 ಹೆಕ್ಟೇರ್ ನಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಕಾಫಿ ಬೋರ್ಡ್ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. 2,708 ವಿದ್ಯುತ್ ಕಂಬಗಳು ಬಿದ್ದು ಹೋಗಿವೆ. 150 ಬಿಟ್ಟು ಉಳಿದೆಲ್ಲಾವನ್ನೂ ಮತ್ತೆ ಅಳವಡಿಸಲಾಗಿದೆ. ಹಾಳಾಗಿದ್ದ 47 ಟ್ರಾನ್ಸ್ ಫಾರ್ಮರ್ ಗಳನ್ನೂ ಹೊಸದಾಗಿ ಅಳವಡಿಸಲಾಗಿದೆ. 344 ಕಿಮೀ ಉದ್ದದ ಲೋಕೋಪಯೋಗಿ, ಜಿಲ್ಲಾ ಪಂಚಾಯ್ತಿ ರಸ್ತೆಗಳು ಹಾನಿ ಆಗಿವೆ. ಇವೆಲ್ಲವನ್ನೂ ಆದ್ಯತೆ ಮೇಲೆ ಸರಿಪಡಿಸಲು ಸೂಚಿಸಲಾಗಿದೆ. ಈ ಬಾರಿ ವಾಡಿಕೆಗಿಂತ ಶೇ50 ರಷ್ಟು ಹೆಚ್ಚು ಮಳೆಯಾಗಿದೆ.‌ ಮುಂಜಾಗ್ರತಾ ಕ್ರಮಗಳ ಜೊತೆಗೆ ಅನಾಹುತದ ಬಳಿಕ ಪರಿಹಾರ ಕಾರ್ಯಗಳನ್ನು ತುರ್ತಾಗಿ ನಡೆಸಲಾಗುತ್ತಿದೆ. ಭೂ ಕುಸಿತದ ದುರಸ್ತಿ ಕಾರ್ಯವನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಶಿರಾಡಿ ಘಾಟಿಗೆ ಭೇಟಿ ನೀಡಿ ಅನಾಹುತಗಳನ್ನು ಪರಿಶೀಲನೆ ನಡೆಸುತ್ತೇನೆ. ಭೂ‌ಕುಸಿತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರಕ್ಕೆ ಜಿಎಸ್‌ಐ ವರದಿ ನೋಡಿ ನಂತರ ತೀರ್ಮಾನಿಸಲಾಗುವುದು” ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: Wayanad Landslide: ಭೂಕುಸಿತದ ಹಾಟ್‌ಸ್ಪಾಟ್‌ಗಳಲ್ಲಿ ಕಾಮಗಾರಿಗೆ ಅನುಮತಿ ನೀಡಿದ್ದೇಕೆ? ಹಸಿರು ನ್ಯಾಯ ಮಂಡಳಿ ಪ್ರಶ್ನೆ

Exit mobile version