Site icon Vistara News

Wayanad Landslide: ಕೇರಳ ಭೂ ಕುಸಿತ; ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

ಬೆಂಗಳೂರು: ನೆರೆಯ ಕೇರಳದಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ (Wayanad Landslide) ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ. ಅಪಾಯದ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಎಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಾಂ ಹೂಡಲು ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಸೇರಿ ಎಲ್ಲಾ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ 24/7 ಸನ್ನದ್ಧವಾಗಿರಬೇಕು. ಅಪಾಯದ ಸ್ಥಳಗಳಿಂದ ಜನರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಕೊಡಗು ಜಿಲ್ಲೆಯು ದುರಂತ ಸ್ಥಳ ವಯನಾಡಿನ ಪಕ್ಕದಲ್ಲೇ ಇದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿ ಅಪಾಯದ ಸ್ಥಿತಿ ಇದೆ. ಅನೇಕ ಕಡೆ ರೆಟ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಕೆಲ ಜಿಲ್ಲೆಗಳಲ್ಲಿ ನಿರಂತರವಾಗಿ ಭೂ ಕುಸಿತ ಸಂಭವಿಸುತ್ತಿದೆ. ನೆರೆ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಅಲ್ಲಿನ ಅಣೆಕಟ್ಟೆಗಳಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ರಾಜ್ಯಕ್ಕೆ ಅಪಾರ ನೆರೆ ನೀರು ಹರಿದು ಬರುತ್ತಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಅಪಾಯದ ಮಟ್ಟ ಮೀರಿ ನೂರಾರು ಗ್ರಾಮಗಳಿಗೆ ನುಗ್ಗಿದೆ, ಅಪಾರ ಬೆಳೆ ನಾಶವಾಗಿದೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಜನರ ಜತೆಯಲ್ಲಿರಬೇಕು ಎಂದು ಸಚಿವರು ಹೇಳಿದ್ದಾರೆ.

ಸರ್ಕಾರ, ಸಚಿವರು, ಶಾಸಕರು, ಅಧಿಕಾರಿಗಳಿಗೆ ನನ್ನ ಕಳಕಳಿಯ ಸಲಹೆ ಇಷ್ಟೇ. ಇಂಥ ದುರಿತ ಪರಿಸ್ಥಿತಿಯಲ್ಲಿ ಇಡೀ ಆಡಳಿತ ವ್ಯವಸ್ಥೆ ಜನರ ಹತ್ತಿರದಲ್ಲಿರಬೇಕು. ರೈತರೊಂದಿಗೆ ನೇರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿರಬೇಕು. ಪ್ರಕೃತಿ ವಿಕೋಪ ಯಾವುದೇ ಕ್ಷಣದಲ್ಲಿ ಬಂದೆರಗುವ ಅಪಾಯವನ್ನು ನಿರ್ಲಕ್ಷಿಸಬಾರದು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ | Kodi Mutt Swamiji: ಕೆಟ್ಟದ್ದೇ ಜಾಸ್ತಿ, ಪ್ರಕೃತಿ ವಿಕೋಪಗಳು ಮುಂದುವರಿಯುತ್ತವೆ: ಭಯಾನಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕೂಡಲೇ ಎಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಾಂ ಹೂಡಲು ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಸೇರಿ ಎಲ್ಲಾ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ 24/7 ಸನ್ನದ್ಧವಾಗಿರಬೇಕು. ಅಪಾಯದ ಸ್ಥಳಗಳಿಂದ ಜನರನ್ನು ತಕ್ಷಣವೇ ಸುರಕ್ಷತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಸಚಿವರು ಕೋರಿದ್ದಾರೆ.

ಕೇರಳದ ಭೂಕುಸಿತ ದುರಂತಕ್ಕೆ ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

ಬೆಂಗಳೂರು: ಕೇರಳದ (Kerala Landslide) ವೈನಾಡಿನಲ್ಲಿ ಸಂಭವಿಸಿದ ಭಾರಿ ಭೂಕುಸಿತ (Wayanad Landslide) ಹಾಗೂ ಜೀವಹಾನಿಯ ಕುರಿತು ಟ್ವೀಟ್‌ ಮಾಡಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು, ದುರಂತ ಸಾವುಗಳಿಗಾಗಿ ಶೋಕ ವ್ಯಕ್ತಪಡಿಸಿದ್ದಾರೆ.

ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ (Wayanad Landslide) ಅನೇಕರು ದಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಗೌರವಾನ್ವಿತ ಪ್ರಧಾನಿ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಸಿಎಂ ಜತೆ ಮಾತನಾಡಿ ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಮಾನ್ಯ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ. ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ. ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು. ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಕೇಂದ್ರ ಸಚಿವರು ಟ್ವೀಟ್‌ ಮಾಡಿದ್ದಾರೆ.

Exit mobile version