ಬೆಂಗಳೂರು: ರಾಜ್ಯಾದ್ಯಂತ ಇನ್ನೆರಡು ದಿನ ಮಳೆಯಾಗುವ (Rain News) ಸಾಧ್ಯತೆ ಇದೆ. ಬೆಂಗಳೂರಲ್ಲಿ ಕೆಲವು ಕಡೆ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗ (Bangalore Rain) ಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೀಸುವ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ರಷ್ಟು ಇರಲಿದೆ ಎಂದು ಇಲಾಖೆ (weather report) ಎಚ್ಚರಿಕೆಯನ್ನೂ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆ ಮುಂದುವರಿಯಲಿದೆ. ಜತೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಮಳೆ ನಡುವೆಯೂ ಉಷ್ಣಾಂಶ ಹೆಚ್ಚಾಗಲಿದೆ. ಸಾಮಾನ್ಯ ದಿನಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮೈಸೂರು ಸೇರಿ ರಾಮನಗರ, ಮಂಡ್ಯ ಹಾಗೂ ಚಾಮರಾಜನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಚಿಕ್ಕಮಗಳೂರು, ಕೊಡುಗು, ಹಾಸನ, ಶಿವಮೊಗ್ಗದಲ್ಲೂ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಪ್ರಮುಖ ನಗರಗಳಲ್ಲಿನ ಪ್ರಸ್ತುತ ತಾಪಮಾನ ಹೀಗಿದೆ;
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಗದಗ: 38 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 22 ಡಿ.ಸೆ
ಬೆಳಗಾವಿ: 34 ಡಿ.ಸೆ – 22 ಡಿ.ಸೆ
ಕಾರವಾರ: 37 ಡಿ.ಸೆ – 27 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 34 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 22 ಡಿ.ಸೆ
ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ
ಭಾನುವಾರ (ಮೇ 28) ಹಾವೇರಿಯ ವಿವಿಧೆಡೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಆಗಿದೆ. ದೇವಿ ಹೊಸೂರು ಗ್ರಾಮದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ. ಸ್ಥಳೀಯರೇ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ತೆಂಗಿನಮರದಲ್ಲಿ ಬೆಂಕಿ ಕಂಡು ಗ್ರಾಮಸ್ಥರು ಆತಂಕಗೊಂಡಿದ್ದರು. ಅದೃಷ್ಟವಶಾತ್ ಅಕ್ಕ ಪಕ್ಕ ಜನರು ಯಾರು ಇರದ ಕಾರಣಕ್ಕೆ ಯಾವುದೇ ಅಪಾಯ ಸಂಭವಿಸಿಲ್ಲ.
ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ
ಮುಂದಿನ 48 ಗಂಟೆಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಿಡಿಲು ಬಡಿಯುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಇಂತಹ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಮನವಿ ಮಾಡಿದ್ದಾರೆ.
-ಹೊರಗೆ ಹೋಗುವಾಗ ಹವಾಮಾನ ಮುನ್ಸೂಚನೆ ಸಂದೇಶಗಳನ್ನು ಪರಿಶೀಲಿಸಿ.
-ಮಳೆ ಸಮಯದಲ್ಲಿ ವಿಶೇಷವಾಗಿ ಹೊಲ, ತೋಟದಲ್ಲಿ ಕೆಲಸ ಮಾಡಲು ಮನೆಯಿಂದ ಹೊರಗೆ ಹೋಗಬೇಡಿ.
-ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯಿರಿ.
-ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಪ್ರವಾಹ ಇಳಿದು ಬರದಂತಹ ತಗ್ಗು ಪ್ರದೇಶದಲ್ಲಿ ಆಶ್ರಯ ಪಡೆಯಿರಿ.
-ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರಿ.
-ವಿದ್ಯುತ್ ಉಪಕರಣ, ವಿದ್ಯುತ್ ಲೈನ್ಗಳು, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಿ.
-ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ, ವಾಹನದಲ್ಲಿಯೇ ಆಶ್ರಯ ಪಡೆಯಿರಿ. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಿ.
-ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಿರಿ.
ಇದನ್ನೂ ಓದಿ: Contaminated Water: ರೇಖಲಮರಡಿ ಬಳಿಕ ಗೊರೆಬಾಳದಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ
-ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು, ಇವು ಮಿಂಚನ್ನು ಆಕರ್ಷಿಸುತ್ತವೆ.
-ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ ಮರಗಳ ಕೆಳಗೆ ಆಶ್ರಯ ಪಡೆಯಿರಿ. ಲೋಹದ ವಸ್ತುಗಳನ್ನು ಬಳಸಬಾರದು. ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಿ. ಸಿಡಿಲಿನ ಸಂದರ್ಭದಲ್ಲಿ ಮೊಬೈಲ್ ಫೋನ್ಗಳನ್ನು ಬಳಸಬೇಡಿ.
-ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು.
-ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ. ಬೆಂಕಿ ಮತ್ತು ವಿದ್ಯುತ್ ಸಂಪರ್ಕದಿಂದ ದೂರವಿರಿ.
-ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು.
-ಸಿಡಿಲಿನ ಸಂದರ್ಭದಲ್ಲಿ, ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇದೆ. ಹೀಗಾಗಿ ಆಗ ಸ್ನಾನ ಮಾಡಬಾರದು, ಪಾತ್ರೆ ತೊಳೆಯಬಾರದು, ಬಟ್ಟೆ ಒಗೆಯಬಾರದು.
-ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಿ.
-ಗುಡುಗು ಸಿಡಿಲಿನ ಸಮಯದಲ್ಲಿ ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನ ಸಂಚಾರ ಬೇಡ.
-ಆಟದ ಮೈದಾನ, ಉದ್ಯಾನವನಗಳು, ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಿ. ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ