ಬೆಂಗಳೂರು/ಕಾರವಾರ: ಉತ್ತರಕನ್ನಡದ ಕಾರವಾರದಲ್ಲಿ ಶನಿವಾರ ಸಂಜೆಯಿಂದಲೇ ಬಿಟ್ಟು ಬಿಡದೆ ಮಳೆ (Rain news) ಸುರಿಯುತ್ತಿದೆ. ಭಾನುವಾರವೂ ಮಳೆ ಮುಂದುವರಿದಿದ್ದು, ಜನರು ಮನೆಯಲ್ಲೇ ಬಂಧಿಯಾಗಿದ್ದಾರೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಸೈಕ್ಲೋನ್ ಪರಿಣಾಮ ಜೂ.18ರ ವರೆಗೆ ಮಳೆಯಾಗುವ (Weather report) ಸಾಧ್ಯತೆ ಇದೆ. ಸಾಧಾರಣದಿಂದ ಭಾರಿ ಗುಡುಗು ಸಹಿತ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಸಮುದ್ರ ಮಟ್ಟದಲ್ಲಿ ಗಾಳಿಯ ವೇಗವೂ ಗಂಟೆಗೆ 55 ಕಿ.ಮೀ ತಲುಪುವ ಸಾಧ್ಯತೆ ಇದೆ. ಈ ಸಮಯದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ತೀರ ಪ್ರದೇಶದ ನಿವಾಸಿಗಳಿಗೆ ಜಾಗ್ರತೆ ವಹಿಸುವಂತೆ ಜಿಲ್ಲಾಡಳಿತವು ಸೂಚನೆ ನೀಡಿದೆ. ಪ್ರವಾಸಿಗರು ಸಮುದ್ರಕ್ಕೆ ಇಳಿಯುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಬೆಂಗಳೂರಲ್ಲಿ ಕವಿದ ಮೋಡ
ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣವಿದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರಲಿದೆ. ಇದರಿಂದಾಗಿ ಕೆಲವೊಮ್ಮೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಕರಾವಳಿಯ ಕೆಲವು ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ದಾವಣಗೆರೆ, ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಕಳ್ಳರಿಗೆ ದಾರಿ ತೋರಿತು ಕೆಟ್ಟುನಿಂತ ಬೀದಿದೀಪ; ಪೊಲೀಸರು ಹಾಕಿದ್ದ ಸಿಸಿಟಿವಿ ಕ್ಯಾಮರಾ ಬ್ಯಾಟರಿ ಮಾಯ!
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವರುಣ ಗುಡುಗಲಿದ್ದಾನೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಮಳೆಯ ಸಿಂಚನವಾಗಲಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ