ಬೆಂಗಳೂರು: ಬಿಪರ್‌ಜಾಯ್ ಸೈಕ್ಲೋನ್ (Cyclone Biporjoy) ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಗದಗ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಬಾಗಲಕೋಟೆ, ಧಾರವಾಡ, ಹಾವೇರಿಯಲ್ಲಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಲ್ಲೂ ಮಳೆಯ ಅಬ್ಬರ ಇರಲಿದೆ. ವಿಜಯನಗರ, ದಾವಣಗೆರೆಯಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ತಾಪಮಾನ ಏರಿಕೆ ಮುನ್ಸೂಚನೆ
ಮಳೆ ಎಚ್ಚರಿಕೆಯ ನಡುವೆಯೂ ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಹೆಚ್ಚಾಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ಯಿಂದ 60 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: Cyclone Biparjoy: ಬಿಪರ್‌ಜಾಯ್ ಚಂಡಮಾರುತ ಭೀತಿ; ಈ ಪದದ ಅರ್ಥ ಏನು? ಮೊದಲು ಎಲ್ಲಿ ಬಳಕೆ?
ಮಂಗಳವಾರ (ಜೂ.6) ಶಿವಮೊಗ್ಗದ ಹೊಳೆಹೊನ್ನೂರು, ಹಾಸನದ ಚನ್ನರಾಯಪಟ್ಟಣದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಕಲಬುರಗಿಯ ಮಹಾಗಾವ್, ಯಾದಗಿರಿಯ ಶೋರಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 39.9 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ