ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿಯಲ್ಲಿ ಭಾರಿ ಮಳೆಯಾಗುವ (Rain News) ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (weather report) ನೀಡಿದೆ. ಒಳನಾಡಿನಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದ್ದು, ಜತೆಗೆ ತಾಪಮಾನ ಏರಿಕೆಯಾಗುವುದರಿಂದ ಧಗೆಯೂ ಹೆಚ್ಚಲಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಬೆಳಗ್ಗೆ ಬಿಸಿಲಿನಿಂದ ಕೂಡಿದರೆ, ಮಧ್ಯಾಹ್ನ ಮೋಡ ಮುಸುಕಿದ ವಾತಾವರಣ ಇರಲಿದೆ. ಸಂಜೆಗೆ ಅಥವಾ ರಾತ್ರಿ ಕೆಲವು ಪ್ರದೇಶಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಗುಡುಗಿನ ಮಳೆ
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಜತೆಗೆ ಉತ್ತರ ಒಳನಾಡಿ ಕೆಲವು ಕಡೆಗಳಲ್ಲಿ ಮಾತ್ರ ಮಳೆಯ ಅಬ್ಬರ ಇರಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಹಾಸನ, ಕೊಡಗು, ಕೋಲಾರದಲ್ಲಿ ವ್ಯಾಪಕ ಮಳೆಯಾಗಲಿದೆ. ಜತೆಗೆ ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಈ ಜಿಲ್ಲೆಗಳಲ್ಲಿ ತಗ್ಗಿದ ಮಳೆ
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ವಿಜಯನಗರದಲ್ಲಿ ಮಳೆ ಪ್ರಮಾಣ ತಗ್ಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗೆ ಯಾವುದೇ ಮಳೆಯ ಮುನ್ಸೂಚನೆ ಇಲ್ಲ.
ಸಮುದ್ರಕ್ಕೆ ಇಳಿಯುವಂತಿಲ್ಲ
ಕರಾವಳಿ ಕರ್ನಾಟಕದಲ್ಲಿ ಗಾಳಿ ವೇಗ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆ ಇದೆ. ಈ ಸಮಯದಲ್ಲಿ ಮೀನುಗಾರರು ಮೀನುಗಾರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜತೆಗೆ ಪ್ರವಾಸಿಗರು ನೀರಿಗೆ ಇಳಿಯದಂತೆ ಎಚ್ಚರಿಸಲಾಗಿದೆ.
ತಾಪಮಾನ ಏರಿಕೆ
ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Road Accident: ರಾಜ್ಯದ ಮೂರು ಕಡೆ ಪ್ರತ್ಯೇಕ ಅಪಘಾತ; ಮೂವರ ಸಾವು, 15ಕ್ಕೂ ಹೆಚ್ಚು ಮಂದಿ ಗಂಭೀರ
ಕಡಲತೀರದಲ್ಲಿ ಹೆಚ್ಚಿದ ಕಡಲ್ಕೊರೆತ
ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್ ಚಂಡಮಾರುತದಿಂದಾಗಿ ಕಾರವಾರ ಕಡಲತೀರದಲ್ಲಿ ಅಬ್ಬರ ಹೆಚ್ಚಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ ಟ್ಯಾಗೋರ್ ಬೀಚ್‌ನಲ್ಲಿ ಆಳೆತ್ತರದ ಅಲೆಗಳು ಅಪ್ಪಿಸುತ್ತಿವೆ. ಗಾಳಿಯ ರಭಸಕ್ಕೆ 3 ರಿಂದ 4 ಮೀಟರ್ ಎತ್ತರಕ್ಕೆ ಅಲೆಗಳು ಏಳುತ್ತಿವೆ. ಕರಾವಳಿಯಲ್ಲಿ ಇನ್ನೂ ಎರಡು ದಿನಗಳ ಕಾಲ ಸೈಕ್ಲೋನ್ ಎಫೆಕ್ಟ್ ಮುಂದುವರಿಯಲಿದೆ. ಅಲೆಗಳು ಅಪ್ಪಳಿಸುತ್ತಿರುವುದರಿಂದ ಮೀನುಗಾರರು ಮುಂಜಾಗ್ರತಾ ಕ್ರಮವಾಗಿ ದೋಣಿಗಳನ್ನು ಎತ್ತರದ ಪ್ರದೇಶಕ್ಕೆ ಸ್ಥಳಾಂತರ ಮಾಡುತ್ತಿದ್ದಾರೆ. ಪ್ರವಾಸಿಗರಿಗೆ ಜಿಲ್ಲಾಡಳಿತವು ಕಡಲತೀರದಲ್ಲಿ ಸಮುದ್ರಕ್ಕಿಳಿಯದಂತೆ ಸೂಚಿಸಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ