ಬೆಂಗಳೂರು: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದರೂ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರವಾಗಿರುವುದರಿಂದ ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಎಚ್ಚರಿಸಲಾಗಿದೆ.
ಮಂಗಳವಾರ ಚಿಕ್ಕಮಗಳೂರಿನ ಕೊಟ್ಟಿಗೆಹಾರ ಮತ್ತು ಶಿವಮೊಗ್ಗದಲ್ಲಿ ಭಾರಿ ಮಳೆಯಾಗಿದ್ದು, ಇತರೆ ಭಾಗದಲ್ಲಿ ಸಾಮಾನ್ಯ ಮಳೆಯಾಗಿರುವ ವರದಿಯಾಗಿದೆ. ಕಳೆದ ಎರಡು ಮೂರು ದಿನಗಳಿಂದ ಮುಂಗಾರು ಸಾಮಾನ್ಯವಾಗಿದ್ದು, ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡಿದೆ.
ಇದನ್ನೂ ಓದಿ | Weather Report: ಮುಂದಿನ 5 ದಿನ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ
ಕರಾವಳಿಯಲ್ಲಿ 5 ದಿನಗಳ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮಂಗಳವಾರ ಯೆಲ್ಲೋ ಅಲರ್ಟ್ ಇದ್ದು, ಕೆಲವು ಕಡೆ ಹೆಚ್ಚಿನ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಒಂದೆರೆಡು ಕಡೆ ಅತಿ ಹೆಚ್ಚು ಮಳೆಯಾಗಲಿದೆ. ಜೂನ್ 29, 30ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮೊದಲೆರಡು ದಿನ ಕೆಲವು ಕಡೆ ಮಳೆಯಾಗಲಿದ್ದು, ನಂತರ ಎಲ್ಲೆಡೆ ಸಾಮಾನ್ಯ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ನಾಲ್ಕೈದು ದಿನ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೀನುಗಾರರಿಗೆ ಎಚ್ಚರಿಕೆ
ಪಶ್ಚಿಮ ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದ್ದು, ಗಾಳಿಯ ವೇಗವೂ 40-50 ಕಿ.ಮೀ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ನಿಗಾ ಇರಿಸಲು ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ | Weather Report | ಮುಂದಿನ ಎರಡು ದಿನ ಭಾರಿ ಮಳೆ: ಮೀನುಗಾರರಿಗೆ ಎಚ್ಚರಿಕೆ