ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಲೆನಾಡು, ದಕ್ಷಿಣ ಒಳನಾಡಿನಲ್ಲೂ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲೂ ಅಬ್ಬರ (Weather report) ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ವರುಣ ಅಬ್ಬರಿಸಲಿದ್ದಾನೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಧಾರವಾಡ, ಬೆಳಗಾವಿ, ರಾಯಚೂರು, ಹಾವೇರಿ ಹಾಗೂ ಗದಗ, ವಿಜಯಪುರದಲ್ಲೂ ಭರ್ಜರಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಗುರುವಾರದಂದು (ಜೂ.22) ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಉತ್ತರ ಕನ್ನಡದ ಮಂಕಿಯಲ್ಲಿ 13 ಸೆಂ.ಮೀ ಮಳೆಯಾಗಿರುವ ವರದಿಯಾಗಿದೆ. ಗರಿಷ್ಠ ಉಷ್ಣಾಂಶ 39.1 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ಇದನ್ನೂ ಓದಿ: Monsoon Makeup Care: ಮಳೆಗಾಲಕ್ಕೆ ವಾಟರ್‌ಪ್ರೂಫ್ ಕಾಸ್ಮೆಟಿಕ್ಸ್ ಬಳಸುತ್ತೀರಾ! ಹಾಗಾದಲ್ಲಿ ಎಚ್ಚರ ವಹಿಸಿ!
ತಾಪಮಾನ ಏರಿಕೆ
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಒಣಹವೆ ಇರಲಿದೆ. ಈ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ ಆಗಲಿದೆ. ಉತ್ತರ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ , ದಕ್ಷಿಣ ಒಳನಾಡಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ತುಮಕೂರು, ಬಾಗಲಕೋಟೆಯಲ್ಲಿ ವರ್ಷಧಾರೆ
ತುಮಕೂರಿನಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗುತ್ತಿದೆ. ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ತುಮಕೂರು ನಗರ ಕೂಲ್ ಆಗಿದೆ. ಇತ್ತ ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಬಾಗಲಕೋಟೆ ಜನತೆಗೆ ವರುಣ ದರ್ಶನ ಕೋರಿದ್ದಾನೆ. ಗಾಳಿ ಸಹಿತ ಮಳೆಯಾಗುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ರೈತರು ಬಿತ್ತನೆಗೆ ಭೂಮಿಯನ್ನು ಹದ ಮಾಡಿಟ್ಟುಕೊಂಡು ಮಳೆಗಾಗಿ ಕಾಯುತ್ತಿದ್ದರು. ಹವಾಮಾನ ಇಲಾಖೆ ಸೂಚನೆಯಂತೆ ಮಳೆ ಆಗುತ್ತಿದೆ. ಹೆಸರು, ತೊಗರಿ, ಅಲಸಂದಿ, ಮುಂಗಾರಿ ಜೋಳ ಬಿತ್ತನೆ ಮಾಡಲು ತಯಾರಿ ನಡೆಸಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ