ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬಿಡುವು ಕೊಟ್ಟಿದ್ದ ವರುಣ, ಮತ್ತೆ ಅಬ್ಬರಿಸಲಿದ್ದಾನೆ. ಮುಂದಿನ ನಾಲ್ಕೈದು ದಿನ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆಯನ್ನು ನೀಡಿದೆ.
ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಮಂಡ್ಯ ಮತ್ತು ಮೈಸೂರು, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಳೆ ನಡುವೆಯೂ ರಾಜ್ಯಾದ್ಯಂತ ತಾಪಮಾನ ಏರಿಕೆ ಆಗಲಿದೆ. ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಇದನ್ನೂ ಓದಿ: PUC Supplementary Exams 2023: ಹಾಜರಾತಿ ಕೊರತೆ: ಪರೀಕ್ಷೆ ವಂಚಿತ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ರಾಜ್ಯದಲ್ಲಿ ಬುಧವಾರದಂದು ಗರಿಷ್ಠ ಉಷ್ಣಾಂಶ 40.7 ಡಿ.ಸೆ ಕಲಬುರಗಿಯಲ್ಲಿ ದಾಖಲಾಗಿದೆ. ದಕ್ಷಿಣ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಮಳೆಯಾಗಿದ್ದು, ಕೊಡಗಿನ ನಾಪೋಕ್ಲು ಎಂಬಲ್ಲಿ 3 ಸೆಂ.ಮೀ. ಮಳೆಯಾಗಿರುವ ವರದಿ ಆಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಮನೆ ಮೇಲೆ ಬಿದ್ದ ಬೃಹತ್ ಗಾತ್ರದ ಮಾವಿನ ಮರ
ಮಡಿಕೇರಿ ಸೇರಿದಂತೆ ಸುತ್ತಮುತ್ತ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ. ಇದ್ದಕ್ಕಿದ್ದಂತೆ ಶುರುವಾದ ಮಳೆಗೆ ಸಿಕ್ಕು ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡಿದರು. ಕೊಡಗಿನ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ನಾಡಕಚೇರಿ ಹಿಂಭಾಗದಲ್ಲಿನ ಪಿಡ್ಯ್ಲೂಡಿ ವಸತಿಗೃಹದ ಮೇಲೆ ಬೃಹತ್ ಗಾತ್ರದ ಮಾವಿನ ಮರವೊಂದು ಬಿದ್ದಿದೆ.
ಪಿಡ್ಯ್ಲೂಡಿ ನೌಕರ ಮುಕ್ತಾರ್ ಎಂಬುವರು ವಾಸವಿದ್ದರು. ಮನೆಯಲ್ಲಿ ಎಲ್ಲರೂ ಇರುವಾಗಲೇ ದುರ್ಘಟನೆ ನಡೆದಿದ್ದು, ನಾಲ್ಕು ಪುಟ್ಟ ಮಕ್ಕಳು ಸೇರಿದಂತೆ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಗ್ರಾಮ ಪಂಚಾಯ್ ಸಿಬ್ಬಂದಿ ಹಾಗೂ ಸುಂಟಿಕೊಪ್ಪ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಂಚಾಯತ್ ಹಾಗೂ ಸಾರ್ವಜನಿಕರ ಸಹಾಯದಿಂದ ಮನೆ ಮೇಲೆ ಬಿದ್ದ ಮರ ತೆರವು ಕಾರ್ಯಾಚರಣೆ ಮಾಡಲಾಗಿದೆ.
ರಾಜ್ಯದ ಇನ್ನುಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ