ಬೆಂಗಳೂರು: ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ (Weather Report) ಇದೆ ಎಂದು ಹವಾಮಾನ ಇಲಾಖೆ (Weather updates) ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು, ಮೈಸೂರು, ಚಿಕ್ಕಮಗಳೂರು ಸೇರಿದಂತೆ 20 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain Alert) ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ತುಮಕೂರು, ವಿಜಯನಗರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲೂ ಮಳೆಯ ಸಿಂಚನವಾಗಲಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬಿರುಗಾಳಿ ಮಳೆ ಸಾಧ್ಯತೆ
ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಇದರ ಹೊರತಾಗಿಯೂ ಕರಾವಳಿಯ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ವರೆಗೂ ಗರಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: IPL Betting: ಐಪಿಎಲ್ ಬೆಟ್ಟಿಂಗ್ ದಂಧೆ; 100ಕ್ಕೂ ಹೆಚ್ಚು ಮಂದಿ ಬಂಧನ; ಅರ್ಧ ಕೋಟಿಗೂ ಅಧಿಕ ಹಣ ಜಪ್ತಿ
ರಾಜ್ಯದಲ್ಲಿ ಸೋಮವಾರ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ತುಮಕೂರಿನ ಕುಣಿಗಲ್‌ನಲ್ಲಿ 6 ಸೆಂ.ಮೀ ಮಳೆಯಾಗಿದ್ದು, ಮೈಸೂರಿನ ಸರಗೂರಿನಲ್ಲಿ 4 ಹಾಗೂ ಹಾಸನದ ಕೊಣನೂರು 2 ಸೆಂ.ಮೀ, ಮಂಡ್ಯದ ಮದ್ದೂರು, ಚಿಕ್ಕನಹಳ್ಳಿ ಎಡಬ್ಲ್ಯುಎಸ್, ಸಿರಾ ತಲಾ 1 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಗರಿಷ್ಠ ಉಷ್ಣಾಂಶ 39.5 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.