ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Karnataka Rains) ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು ಹಾಗೂ ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ಶಿವಮೊಗ್ಗದಲ್ಲಿ ವ್ಯಾಪಕ (Weather Report) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ, ಕೊಪ್ಪಳದಲ್ಲಿ ಗುಡುಗುಸಹಿತ ವರುಣ ಅಬ್ಬರಿಸಲಿದ್ದಾನೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಇದನ್ನೂ ಓದಿ: Karnataka Election Results Live Updates: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಬೆಳವಣಿಗೆ
ಎಲ್ಲೆಲ್ಲಿತ್ತು ವರುಣನ ಅಬ್ಬರ?
ಶುಕ್ರವಾರ (ಮೇ 12) ರಾಜ್ಯದಲ್ಲಿ ಕರಾವಳಿಯ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಾವಣಗೆರೆಯ ಹೊನ್ನಾಳಿಯಲ್ಲಿ 7 ಸೆಂ.ಮೀ, ಸವಣೂರು, ಅಣ್ಣಿಗೆರೆ ಆರ್ಸ್ 4 ಸೆಂ.ಮೀ ಮಳೆಯಾಗಿದೆ. ಲಕ್ಷ್ಮೇಶ್ವರ 3, ಬನವಾಸಿ, ಧಾರವಾಡ, ರಾಣೆಬೆನ್ನೂರು ತಲಾ 2 ಸೆಂ.ಮೀ ಮಳೆಯಾಗಿದೆ. ಬಂಕಾಪುರ ಶಿಗ್ಗಾಂವ್, ಗುತ್ತಲ್, ಶಿರಹಟ್ಟಿ, ಬೇಲೂರು, ಬುಕ್ಕಪಟ್ಟಣದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 40.2 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.