ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (weather report) ಮುನ್ಸೂಚನೆಯನ್ನು ನೀಡಿದೆ. ಆದರೆ ದಕ್ಷಿಣ ಒಳನಾಡಿನಲ್ಲಿ ವರುಣ ಮುನಿಸಿಕೊಂಡಂತೆ ಕಾಣುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಇತ್ತ ಮಲೆನಾಡಿನ ಶಿವಮೊಗ್ಗ ಮತ್ತು ಕೊಡಗಿನಲ್ಲಿ ಮಳೆರಾಯ ಆರ್ಭಟ ಇರಲಿದೆ. ಗುಡುಗು ಸಹಿತ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಇನ್ನು ಹಾಸನ ಮತ್ತು ಚಿಕ್ಕಮಗಳೂರಲ್ಲಿ ಗುಡುಗು ಇದ್ದರೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇತ್ತ ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ ಮತ್ತು ರಾಯಚೂರಿನಲ್ಲೂ ಜಿಟಿ ಜಿಟಿ ಮಳೆಯಾಗಲಿದೆ. ಈ ಪ್ರದೇಶದ ಉಳಿದ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಸೇರಿದಂತೆ ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ.
ಬಿರುಗಾಳಿ ಮಳೆ
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-55 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: Video Viral : ಅಸುನೀಗಿತು ಪ್ರೀತಿಯ ಹಸು; ಅಳುತ್ತಲೇ ಹಾಲು-ತುಪ್ಪ ಬಿಟ್ಟ ರೈತ, ಊರಿಗೆಲ್ಲ ಊಟ ಹಾಕಿದ!
ಒಳನಾಡಿನಲ್ಲಿ ದುರ್ಬಲಗೊಂಡ ಮುಂಗಾರು
ರಾಜ್ಯದಲ್ಲಿ ಬುಧವಾರದಂದು ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಒಳನಾಡಿನಲ್ಲಿ ದುರ್ಬಲಗೊಂಡಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉಡುಪಿಯ ಕುಂದಾಪುರದಲ್ಲಿ 7 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ