Site icon Vistara News

Weather Report: ಕರಾವಳಿಯಲ್ಲಿ ಮುಂದುವರಿದ ಮಳೆಯಾಟ; ಒಳನಾಡಿನಲ್ಲಿ ಕೊಂಚ ಬ್ರೇಕ್‌

Rain in hasan

ಬೆಂಗಳೂರು: ರಾಜ್ಯಾದ್ಯಂತ ಜೂನ್‌ 16ರಂದು ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಕಲಬುರಗಿ ಹಾಗೂ ರಾಯಚೂರು, ವಿಜಯಪುರ, ಯಾದಗಿರಿಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು ಹಾಗೂ ದಾವಣಗೆರೆ, ಹಾಸನ, ಕೊಡಗು, ಕೋಲಾರ ಸೇರಿದಂತೆ ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಲ್ಲಿ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಕೆಲವು ಕಡೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಸಮುದ್ರಕ್ಕೆ ಮುಂದುವರಿದ ನಿರ್ಬಂಧ

ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಯಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜತೆಗೆ ಬೀಚ್‌ಗಳಲ್ಲಿ ಪ್ರವಾಸಿಗರ ಮೋಜು ಮಸ್ತಿಗೂ ಬ್ರೇಕ್‌ ಹಾಕಲಾಗಿದೆ.

ಈ ಜಿಲ್ಲಗಳಿಗಿಲ್ಲ ಮಳೆ ಅಲರ್ಟ್‌

ವಿಜಯನಗರ, ರಾಮನಗರ,ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ,ಬಳ್ಳಾರಿ ಹಾಗೂ ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೀದರ್‌ ಜಿಲ್ಲೆಗಳಿಗೆ ಮಳೆ ಅಲರ್ಟ್‌ ಇಲ್ಲ. ಬದಲಿಗೆ ಈ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Road Accident: ಒಂದೇ ವಾರದಲ್ಲಿ ದುರಂತ ಸಾವು ಕಂಡ ಅಣ್ಣ-ತಂಗಿ; ಲಾರಿ ಡಿಕ್ಕಿಯಾಗಿ ಪ್ರಾಣ ಬಿಟ್ಟ ವಿದ್ಯಾರ್ಥಿ

ರಾಯಚೂರು, ಕಲಬುರಗಿಯಲ್ಲಿ ಏರಿದ ತಾಪಮಾನ

ಜೂ.15ರಂದು ಗರಿಷ್ಠ ಉಷ್ಣಾಂಶ 39.6 ಡಿಗ್ರಿ ಸೆಲ್ಸಿಯಸ್‌ ರಾಯಚೂರು ಹಾಗೂ ಕಲಬುರಗಿಯಲ್ಲಿ ದಾಖಲಾಗಿದೆ. ಉಳಿದಂತೆ ಬೆಳ್ತಂಗಡಿ, ಕೋಟ, ಕುಂದಾಪುರ ಹಾಗೂ ಮಂಚಿಕೇರಿ, ಕೊಟ್ಟಿಗೆಹಾರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version