ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ (Weather Report) ಸಾಧ್ಯತೆ ಇದೆ. ದಕ್ಷಿಣ ಕನ್ನಡದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Update) ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಗದಗ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಲ್ಲೂ ಮಳೆಯ ಅಬ್ಬರ ಇರಲಿದೆ.
ಮಳೆಗೆ ವಿದ್ಯುತ್ ಸಂಪರ್ಕ ಕಡಿತ, ಉಕ್ಕಿ ಹರಿದ ಹಳ್ಳ-ಕೊಳ್ಳಗಳು
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗುರುವಾರ ಬೆಳಗಿನಿಂದಲೇ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಅಬ್ಬರಕ್ಕೆ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ಕೆರೆಕಟ್ಟೆಗಳು ಭರ್ತಿಯಾಗಿವೆ. ಜಿಲ್ಲೆಯ ಸಕರಾಯಪಟ್ಟಣ, ಹುಲಿಕೆರೆ, ಕೇತುಮಾರನಹಳ್ಳಿಯಲ್ಲಿ ಭಾರಿ ಮಳೆಯಿಂದಾಗಿ ಕೆರೆಗಳ ಕೋಡಿ ಬಿದ್ದಿದೆ. ಇದರಿಂದಾಗಿ ರಸ್ತೆಯ ಮೇಲೆ ನೀರು ಹರಿದು ಕೆಲಕಾಲ ಸಂಚಾರಕ್ಕೆ ತೊಡಕುಂಟಾಗಿದೆ. ಜತೆಗೆ ಜಮೀನು ಗದ್ದೆಗಳಿಗೆ ನೀರು ನುಗ್ಗಿದ್ದು ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ದಿಢೀರನೆ ಸುರಿದ ಮಳೆಯಿಂದಾಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಕರಾವಳಿಯಲ್ಲಿ ಬೀಸಲಿದೆ ಬಿರುಗಾಳಿ, ಸಮುದ್ರಕ್ಕೆ ತೆರಳದಂತೆ ಸೂಚನೆ
ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ಯಿಂದ 60 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಈ ಸಮಯದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರವಾಸಿಗರು ಸಮುದ್ರದ ತೀರಕ್ಕೆ, ನದಿಯ ಬಳಿ ಹೋಗದಂತೆ ಎಚ್ಚರಿಸಲಾಗಿದೆ.
ಬಿಸಿಯಾಗಲಿದೆ ವಾತಾವರಣ
ಮಳೆ ಎಚ್ಚರಿಕೆಯ ನಡುವೆಯೂ ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಹೆಚ್ಚಾಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮಳೆ ಬಂದರೂ ಕೂಲ್ ಕೂಲ್ ವಾತಾವರಣಕ್ಕಿಂತ ಧಗೆ ಹೆಚ್ಚಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಇದನ್ನೂ ಓದಿ: Mercer Survey: ಮುಂಬೈ ಅತಿ ದುಬಾರಿ ನಗರವಾದ್ರೆ, ಚೆನ್ನೈನಲ್ಲಿ ಎಣ್ಣೆ ರೇಟು ಹೆಚ್ಚು! ಬೆಂಗಳೂರು ಯಾವ ಸ್ಥಾನದಲ್ಲಿದೆ?
ಪ್ರಮುಖ ನಗರಗಳಲ್ಲಿನ ಇಂದಿನ ಹವಾಮಾನ ಹೀಗಿದೆ
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 41 ಡಿ.ಸೆ – 27 ಡಿ.ಸೆ
ಗದಗ: 37 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 35 ಡಿ.ಸೆ – 22 ಡಿ.ಸೆ
ಕಾರವಾರ: 37 ಡಿ.ಸೆ – 27 ಡಿ.ಸೆ
ಮಂಗಳೂರು: 35 ಡಿ.ಸೆ – 26 ಡಿ.ಸೆ
ಹೊನ್ನಾವರ: 33 ಡಿ.ಸೆ- 26 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 22 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ