ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರ (Weather Report) ಮುಂದುವರಿದಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು ಸೇರಿ ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ರಾಯಚೂರು, ಕಲಬುರುಗಿ, ಯಾದಗಿರಿಯಲ್ಲೂ ಮಳೆ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಕಡೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಈ ಜಿಲ್ಲೆಗಳಿಗೆ ಗುಡುಗು ಮುನ್ನೆಚ್ಚರಿಕೆ:
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶದ ಎಚ್ಚರಿಕೆ:
ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Road Accident: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಬಸ್ ನಜ್ಜುಗುಜ್ಜು, ನಾಲ್ವರ ದುರ್ಮರಣ
ರಾಜ್ಯದಲ್ಲಿ ಶನಿವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಮಂಡ್ಯದ ಕೃಷ್ಣರಾಜಪೇಟೆಯಲ್ಲಿ 2 ಸೆಂ.ಮೀ, ಕೃಷ್ಣರಾಜಸಾಗರ, ಗುಬ್ಬಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 39.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.