ಬೆಂಗಳೂರು: ರಾಜ್ಯದ ಬಹುತೇಕ ಮಳೆ ಅಬ್ಬರ ಕಡಿಮೆ ಆಗಿದ್ದರೂ ಮುಂದಿನ 24 ಗಂಟೆಯಲ್ಲಿ (ಜು.10) ಕರ್ನಾಟಕ ಕರಾವಳಿಯ ಕೆಲವು ಕಡೆ ಗುಡುಗು ಸಹಿತ ಭಾರೀ ಮಳೆ (Rain News) ಸಾಧ್ಯತೆ ಇದೆ. ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸಿದ್ದರೆ, ಒಳನಾಡಿನಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ.
ಕರಾವಳಿಯ ಕೆಲವು ಕಡೆ ಮಳೆ ಅಬ್ಬರ
ಕರಾವಳಿ ಭಾಗವಾದ ಉತ್ತರ ಕನ್ನಡ, ಉಡುಪಿ , ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ ಕೆಲವು ಕಡೆ ಮಾತ್ರ ಮುಂದುವರಿಯಲಿದೆ. ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಗಡುಗು, ಮಿಂಚಿನ ಮಳೆಯಾಗಲಿದೆ. ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. 2 ವಾರಗಳಿಗೂ ಹೆಚ್ಚು ಸಮಯ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗುತಿತ್ತು. ಆದರೆ ನಾಳೆಗೆ ಯಾವುದೇ ಎಚ್ಚರಿಕೆಯನ್ನು ನೀಡಿಲ್ಲ.
ಬೆಂಗಳೂರು, ರಾಮನಗರದಲ್ಲಿ ಗುಡುಗಿನ ಮಳೆ
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ರಾಮನಗರ, ಬೆಂಗಳೂರು ನಗರ, ಕೋಲಾರ, ಮೈಸೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಭಾಗವಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ:Video Viral : ರೈಲಿಗೆ ಸಿಲುಕೇ ಬಿಡುತ್ತಿದ್ದ ವೃದ್ಧನನ್ನು ಕಾಪಾಡಿದ ಆರ್‌ಪಿಎಫ್ ಕಾನ್‌ಸ್ಟೇಬಲ್!
ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ
ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿ ವ್ಯಾಪಕ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಜು.8ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ 149 ಮಿ.ಮೀ, ಮಂಡೆಕೋಲು 105 ಮಿ.ಮೀ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರೆಂಜಾಳದಲ್ಲಿ 95 ಮಿ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ