ಬೆಂಗಳೂರು: ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯ ಅಬ್ಬರ (Weather Report) ಮುಂದುವರಿಯಲಿದೆ. ಕಳೆದೊಂದು ವಾರದಿಂದ ಮೋಚಾ ಚಂಡಮಾರುತದ (Mocha) ಪರಿಣಾಮದಿಂದಾಗಿ ರಾಜ್ಯದ ವಿವಿಧೆಡೆ ವರುಣ (Karnataka rain) ಅಬ್ಬರಿಸಿದ್ದ. ಆದರೆ ಈಗ ಮೋಚಾ ಉತ್ತರ ಈಶಾನ್ಯದ ಕಡೆಗೆ ಚಲಿಸುವ ಸಾಧ್ಯತೆಯಿದ್ದು, ಆಗ್ನೇಯ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್ ಕರಾವಳಿಯನ್ನು ಕಾಕ್ಸ್ ಬಜಾರ್ (ಬಾಂಗ್ಲಾದೇಶ) ಮತ್ತು ಕ್ಯಾಕ್ಪ್ಯು (ಮ್ಯಾನ್ಮಾರ್) ನಡುವೆ ದಾಟಲಿದೆ.
ಹೀಗಾಗಿ ರಾಜ್ಯದಲ್ಲಿ ಮೋಚಾ ದುರ್ಬಲಗೊಂಡಿರುವ ಕಾರಣದಿಂದಾಗಿ ಮಳೆಯ ಅಬ್ಬರ ತಗ್ಗಿದೆ. ಸೋಮವಾರದಂದು ಬೆಳಗಾವಿ, ಹಾವೇರಿ, ಬಳ್ಳಾರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉಳಿದಂತೆ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ.
ಮಲೆನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಮನೆ ಬಳಿ ಜಮಾಯಿಸುತ್ತಿರುವ ಬೆಂಬಲಿಗರು; ಪೊಲೀಸ್ ಭದ್ರತೆ
ತಾಪಮಾನ ಏರಿಕೆ ಸಾಧ್ಯತೆ
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಂಭವ ಇದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಮಳೆಯ ಜತೆಗೆ ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 -3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.