ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ಜೋರಾಗಿದ್ದು, ಮುಂದಿನ ಮೂರು ದಿನಗಳ ಕಾಲ ಮಳೆ ಅಬ್ಬರ ಇರಲಿದೆ ಎಂದು (Weather Report) ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಇನ್ನು ಮೂರು ದಿನ ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ಮುಂದಿನ ಮೂರು ದಿನ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿಗೆ ಅ.18ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ,ಕೊಪ್ಪಳ, ರಾಯಚೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿ ಇರಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವೂ ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ | Rain News | ಸೇತುವೆ ದಾಟಲು ಹೋಗಿ ಇಬ್ಬರು ನೀರುಪಾಲು; ಶೋಧಕಾರ್ಯದಲ್ಲಿ ಅಗ್ನಿಶಾಮಕ ಸಿಬ್ಬಂದಿ