ಬೆಂಗಳೂರು: ರಾಜ್ಯಾದ್ಯಂತ ಕಳೆದೊಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ಕರಾವಳಿ ಭಾಗಕ್ಕೆ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದುವರೆಗೆ ರೆಡ್ ಅಲರ್ಟ್ ಘೋಷಿಸಲಾಗಿತ್ತು.
ಜುಲೈ 12, 13 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಭಾರಿಯಿಂದ ಅತೀ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲಲ್ಲಿ ಭಾರೀ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತವರಣ ಇರಲಿದ್ದು, ಸಾಧರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಧ್ಯಮ ಮಳೆಯಾಗಲಿದೆ.
ಇದನ್ನೂ ಓದಿ | Rain | ರಾಜ್ಯದ ಈ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಜುಲೈ 9ರಂದು ರಜೆ ಘೋಷಣೆ
ಮಳೆ ಅಬ್ಬರ ಶಾಲೆಗಳಿಗೆ ರಜೆ ಘೋಷಣೆ
ಶಿವಮೊಗ್ಗದ ಸಾಗರ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ಜುಲೈ 12ರಂದು ರಜೆ ಘೋಷಣೆ ಮಾಡಲಾಗಿದೆ. ಸಾಗರ ಹಾಗೂ ಹೊಸನಗರ, ತೀರ್ಥಹಳ್ಳಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಇತ್ತ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಜೆ ನೀಡಿ ಜಿಲ್ಲಾಧಿಕಾರಿ ಗಿರೀಶ್ ಆದೇಶಿಸಿದ್ದಾರೆ.
ಆದರೆ ಉಡುಪಿ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗುತ್ತಿದ್ದು, ರೆಡ್ ಅಲರ್ಟ್ ಹಿಂದಕ್ಕೆ ಪಡೆದು ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಜುಲೈ 12 ರಂದು ಶಾಲಾ-ಕಾಲೇಜು ಆರಂಭಿಸಬಹುದು ಎಂದು ಜಿಲ್ಲಾಧಿಕಾರಿ ಕುಮಾರ್ ರಾವ್ ಎಂ. ತಿಳಿಸಿದ್ದಾರೆ.
ಇದನ್ನೂ ಓದಿ | Rain News | ಕಿತ್ತೂರು ತಾಲೂಕಿನಲ್ಲಿ ಮಳೆ ಹಾನಿಗೊಳಪಟ್ಟ ಮನೆಗಳ ಸಂಖ್ಯೆ 30ಕ್ಕೇರಿಕೆ