Site icon Vistara News

Weather report : ಉತ್ತರ ಕರ್ನಾಟಕದಲ್ಲಿ ನಾಳೆ ಬಿರುಗಾಳಿ ಮಳೆ!

Rain image mom and son

ಬೆಂಗಳೂರು: ನೈರುತ್ಯ ಮುಂಗಾರು (Southwest monsoon) ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಚುರುಕುಗೊಂಡಿದೆ. ರಾಜ್ಯಾದ್ಯಂತ ಬಹುತೇಕಗಳಲ್ಲಿ ಮಳೆಯಾಗುವ (rain news) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ರಾಜ್ಯದಲ್ಲಿ ಬುಧವಾರ ಉತ್ತರ ಕನ್ನಡದ ಕ್ಯಾಸಲ್‌ ರಾಕ್‌ನಲ್ಲಿ 17 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಮುಂದಿನ 24 ಗಂಟೆಯಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ರಾಯಚೂರು ಸೇರಿದಂತೆ ವಿಜಯಪುರ, ಯಾದಗಿರಿಯಲ್ಲಿ ಅಬ್ಬರದ ಮಳೆಯಾಗಲಿದೆ.

ಇದನ್ನೂ ಓದಿ: Rain News : ಸೋರುತ್ತಿರುವಲ್ಲೇ ಪಾಠ; ಮಳೆಗೆ ಬೀಳುತ್ತಿವೆ ಶಾಲಾ ಕಟ್ಟಡಗಳು

ಉಳಿದಂತೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಗಾಳಿಯೂ ಬೀಸಲಿದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಬಿರುಗಾಳಿ ಮುನ್ನೆಚ್ಚರಿಕೆ

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡುತ್ತಿರುವ ಪೊಲೀಸ್‌ ಸಿಬ್ಬಂದಿ

ನದಿ ತೀರದಲ್ಲಿ ಸೆಲ್ಫಿ ಬ್ಯಾನ್‌

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ 1.4 ಲಕ್ಷ ಕ್ಯೂಸೆಕ್ ನೀರು ಒಳಹರಿವು ಹೆಚ್ಚಾಗಿದೆ. ಇತ್ತ ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ನದಿ ತೀರದ ಗ್ರಾಮಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೃಷ್ಣಾ ನದಿಗೆ ಹೆಚ್ಚು ನೀರು ಬಿಡುಗಡೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಪೊಲೀಸ್‌ ಸಿಬ್ಬಂದಿ ಮೈಕ್‌ ಮೂಲಕ ತಿಂಥಣಿ ಗ್ರಾಮದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ನದಿ ತೀರದಲ್ಲಿ ಯುವಕರ ಹುಚ್ಚು ಸಾಹಸ ಹಿನ್ನೆಲೆ ಯಾರು ನದಿ ತೀರಕ್ಕೆ ತೆರಳಿ ಸೆಲ್ಫಿ ತೆಗೆದುಕೊಳ್ಳುವ ಸಾಹಸ ಮಾಡಬೇಡಿ. ಸುರಕ್ಷಿತ ಸ್ಥಳದಲ್ಲಿ ಇರಿ ಎಂದು ಸೂಚಿಸಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್‌ ಮಾಡಿ

Exit mobile version