Site icon Vistara News

Weather Report : ಬೆಂಗಳೂರು ಸೇರಿ ಕರಾವಳಿ, ಮಲೆನಾಡಿನಲ್ಲಿ ಮಳೆ ಸಾಧ್ಯತೆ ಎಷ್ಟು?

Rain image

ಬೆಂಗಳೂರು: ಕರ್ನಾಟಕ ಕರಾವಳಿಯಲ್ಲಿಂದು ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಕರಾವಳಿಯಲ್ಲಿ ನೈರುತ್ಯ ಮುಂಗಾರು (Southwest monsoon) ಚುರುಕಾಗಿದ್ದರೆ, ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಜು.16ರವರೆಗೆ 20 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ಕರಾವಳಿಯಲ್ಲಿ ಮುಂದುವರಿದ ಅಬ್ಬರ

ಕರಾವಳಿಯ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮಲೆನಾಡಿನ ಭಾಗವಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ದಾವಣಗೆರೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಸದ್ದು ಮಾಡದ ಮಳೆ

ರಾಜ್ಯದಲ್ಲಿ ಮುಂಗಾರು ಆಗಮಿಸಿದರೂ ಉತ್ತರ ಒಳನಾಡಿನಲ್ಲಿ ಮಳೆಯ ಸದ್ದಿಲ್ಲ. ಹೀಗೆ ಪರಿಸ್ಥಿತಿ ಮುಂದುವರಿದರೆ ಬರಗಾಲ ಸೃಷ್ಟಿಯಾಗುವ ಸಾಧ್ಯತೆ ಇದೆ. ಮಳೆಗಾಗಿ ಜನರು ದೇವರ ಮೊರೆ ಹೋಗಿದ್ದಾರೆ. ಸದ್ಯ ಹವಾಮಾನ ಇಲಾಖೆ ಅಂದಾಜಿನ ಪ್ರಕಾರ ಜು.14-15ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬಳ್ಳಾರಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರಲ್ಲಿ ಸಂಜೆಗೆ ಮಳೆಯಾಟ

ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನದ ನಂತರ ಶುರುವಾಗುವ ಮಳೆಯಾಟ ಸಂಜೆ ನಂತರ ಅಧಿಕವಾಗಲಿದೆ. ಕೆಲವೊಮ್ಮೆ ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಬಲವಾದ ಗಾಳಿಯೂ ಬೀಸಲಿದ್ದು, ಜನರನ್ನು ನಡುಗಿಸಲಿದೆ.

ಸಮುದ್ರಕ್ಕೆ ಇಳಿಯುವಂತಿಲ್ಲ

ಜು14ರಂದು ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕರಾವಳಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 34 ಡಿ.ಸೆ – 24 ಡಿ.ಸೆ
ಗದಗ: 31 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 28 ಡಿ.ಸೆ – 25 ಡಿ.ಸೆ
ಮಂಗಳೂರು: 26 ಡಿ.ಸೆ – 24 ಡಿ.ಸೆ
ಹೊನ್ನಾವರ: 28 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version