ಬೆಂಗಳೂರು: ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಮೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ (Rain News) ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Weather report) ಉಲ್ಲೇಖಿಸಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಬೆಳಗಾವಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ, ಇನ್ನೂ ಎರಡು ದಿನ ಈ ಭಾಗದಲ್ಲಿ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯು ತನ್ನ ಅಂದಾಜು ವರದಿಯನ್ನು ನೀಡಿದೆ.
ಇದನ್ನೂ ಓದಿ: RBI Assistant Recruitment: ಆರ್‌ಬಿಐನಲ್ಲಿದೆ 450 ಹುದ್ದೆ; ಈ ಪದವಿ ಪಡೆದಿದ್ದರೆ ಇಂದೇ ಅರ್ಜಿ ಸಲ್ಲಿಸಿ
ಅಲ್ಲದೆ, ಮುಂದಿನ ಎರಡು, ಮೂರು ದಿನಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಮಳೆ ಪ್ರಮಾಣ ಅಲ್ಪ ಪ್ರಮಾಣದಲ್ಲಿ ತಗ್ಗಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗುಡುಗು/ಬಿರುಗಾಳಿಯ ಮುನ್ನೆಚ್ಚರಿಕೆ
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಆದರೆ, ಮೀನುಗಾರರಿಗೆ ಯಾವುದೇ ಎಚ್ಚರಿಕೆಯನ್ನು ನೀಡಲಾಗಿಲ್ಲ.
ಬೆಂಗಳೂರು ಮತ್ತು ಸುತ್ತಮುತ್ತಲ ಪರಿಸ್ಥಿತಿ ಏನು?
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ಆಗಾಗ ಬಿಸಿಲಿನ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಕಡೆ ಸಾಧಾರಣ ಮಳೆಯಾಗಲಿದ್ದರೂ, ಇನ್ನು ಕೆಲವು ಕಡೆ ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: JOB NEWS : ಆರು ತಿಂಗಳಲ್ಲಿ ಸರ್ಕಾರಿ ಇಲಾಖೆಗಳ ಎಲ್ಲಾ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಹೈಕೋರ್ಟ್ ಆದೇಶ
ಬೆಂಗಳೂರಿನಲ್ಲಿ ಕೆಲವೊಮ್ಮೆ ಬಲವಾಗಿ ಗಾಳಿ ಬೀಸುವ ಸಾಧ್ಯತೆ ಇದೆ. ಇನ್ನು ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ.