ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ (ಜು.19) ನೈರುತ್ಯ ಮುಂಗಾರು (Weather Report) ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯ, ಮಾಣಿಯಲ್ಲಿ ಭಾರಿ ಮಳೆಯಾಗಿರುವ ವರದಿಯಾಗಿದೆ.
ಉತ್ತರ ಕನ್ನಡದ ಕ್ಯಾಸಲ್ ರಾಕ್, ಬೇಲಿಕೇರಿ, ಬನವಾಸಿ, ಗೇರುಸೊಪ್ಪ, ಕದ್ರಾ, ಸಿದ್ದಾಪುರ ಹಾಗೂ ಕೊಡಗಿನ ಭಾಗಮಂಡಲ, ಸಂಪಾಜೆ ಸೇರಿದಂತೆ ಹಲವು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ.
ಇದನ್ನೂ ಓದಿ | ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಅವಾಂತರ: ವಿದ್ಯುತ್ ವೈರ್ ತಗುಲಿ ಯುವಕ ಸಾವು
ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಕರಾವಳಿಯ ಎಲ್ಲ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಒಂದೆರಡು ಬಾರಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ ಇರಲಿದೆ. ಇದು 60 ಕಿ.ಮೀ.ವರೆಗೂ ತಲುಪುವ ಸಾಧ್ಯತೆ ಇದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳಬಾರದೆಂದು ಸೂಚಿಸಲಾಗಿದೆ.
ಇದನ್ನೂ ಓದಿ | Rain News | ಮಳೆ ಕಡಿಮೆಯಾದರೂ ನಿಲ್ಲದ ಹಾನಿ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ