ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು (Southwest Monsoon) ಚುರುಕು ಪಡೆದುಕೊಂಡಿದ್ದು, ಹಲವೆಡೆ ವ್ಯಾಪಕ (Weather report) ಮಳೆಯಾಗುತ್ತಿದೆ. ಈಗಾಗಲೇ ಕರಾವಳಿಯಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದ್ದು, ನಾಳೆ (ಜು.5) ಅತಿ ಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್ (Red alert) ಘೋಷಣೆ ಮಾಡಲಾಗಿದೆ. ಕರಾವಳಿ ಭಾಗವಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮಳೆಯ ಅಬ್ಬರ ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಬಿರುಗಾಳಿಯು ಗಂಟೆಗೆ 55- 65 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಇನ್ನು ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡುವ ಸಂಬಂಧ ಜಿಲ್ಲಾಡಳಿತವು ಯಾವುದೇ ತೀರ್ಮಾನ ಮಾಡಿಲ್ಲ ಎನ್ನಲಾಗಿದೆ.
ಇನ್ನು ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆಯಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಈ ಜಿಲ್ಲೆಗಳಿಗೆ ಜುಲೈ 5ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಮೈಸೂರಲ್ಲಿ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಹಾವೇರಿಯಲ್ಲೂ ವ್ಯಾಪಕ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಜತೆಗೆ ಬಾಗಲಕೋಟೆ, ಕೊಪ್ಪಳ ಜಿಲ್ಲೆಯ ಕೆಲವು ಕಡೆ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಬಾರಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Monsoon Nail Art: ನೇಲ್ ಆರ್ಟ್‌ಗೂ ಲಗ್ಗೆ ಇಟ್ಟ ಮಾನ್ಸೂನ್ ಚಿತ್ತಾರ!
ದಕ್ಷಿಣ ಕನ್ನಡದಲ್ಲಿ ಅಬ್ಬರದ ಮಳೆ
ರಾಜ್ಯದಲ್ಲಿ ಜು.3 ಸೋಮವಾರದಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಜಿಲ್ಲೆಯ ಮೂಲ್ಕಿಯಲ್ಲಿ 17 ಸೆಂ.ಮೀ, ಪಣಂಬೂರು, ಮಂಗಳೂರಲ್ಲಿ ತಲಾ 15 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಕುಮಟಾ 13 ಸೆಂ.ಮೀ ಮಳೆಯಾಗಿದ್ದರೆ, ಅಂಕೋಲಾ, ಮಂಗಳೂರು ವಿಮಾನ ನಿಲ್ದಾಣದಲ್ಲಿ ತಲಾ 12 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ