ಬೆಂಗಳೂರು: ಇನ್ನೆರಡು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ (Karnataka Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Weather Update) ನೀಡಿದೆ. ಜತೆಗೆ ಗಾಳಿ ವೇಗವೂ ಹೆಚ್ಚು ಇರಲಿದ್ದು, ಇತ್ತ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ (Weather report) ತಗ್ಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ರಾಜಧಾನಿ ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬಿರುಗಾಳಿ ಸಹಿತ ಗುಡುಗು ಮುನ್ನೆಚ್ಚರಿಕೆ
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಮಳೆಯ ಜತೆಗೆ ಮುಂದಿನ 48 ಗಂಟೆಯಲ್ಲಿ ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 -3ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Road Accident: ಮಂಡ್ಯದಲ್ಲಿ ಟಿಪ್ಪರ್ ಹರಿದು ಬೈಕ್ ಸವಾರ ಮೃತ್ಯು; ಲಾರಿ ಚಾಲಕ ಪರಾರಿ
ಕಲಬುರುಗಿಯಲ್ಲಿ ತಾಪಮಾನ ಏರಿಕೆ
ರಾಜ್ಯದಲ್ಲಿ ಶನಿವಾರ (ಮೇ 13) ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನ ಒಣ ಹವಾಮಾನ ಇತ್ತು. ದಕ್ಷಿಣ ಕನ್ನಡದ ಪುತ್ತೂರು, ಉಡುಪಿ ಕುಂದಾಪುರ ತಲಾ 3 ಸೆಂ.ಮೀ ಹಾಗೂ ದಕ್ಷಿಣ ಕನ್ನಡ ಮಣಿ, ಕಾರ್ಕಳ, ಭಾಗಮಂಡಲ ತಲಾ 2 ಸೆಂ.ಮೀ, ಕೋಟ, ಪಣಂಬೂರು, ಹುಣಸೂರು, ತುಮಕೂರಿನ ಶಿರಾದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಲಬುರುಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ ಉಷ್ಣಾಂಶ 41.6.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.