ಬೆಂಗಳೂರು: ರಾಜ್ಯದಲ್ಲಿ ಮೇ 19ರಂದು (ಶುಕ್ರವಾರ) ಹಲವು ಜಿಲ್ಲೆಗಳಲ್ಲಿ ಮಳೆಯಾಗುವ (Karnataka Rains) ಸಾಧ್ಯತೆ ಇದೆ. ಜತೆಗೆ ಹಲವು ಕಡೆ ಬಿಸಿ ಗಾಳಿಯೊಂದಿಗೆ ಧಗೆ ಹೆಚ್ಚಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಮಂಡ್ಯ ಮತ್ತು ಮೈಸೂರು, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೆಂಗಳೂರು ನಗರದಲ್ಲಿ ಮುಂಜಾನೆ ಬಿಸಿಲು ಇದ್ದರೆ ಮಧ್ಯಾಹ್ನದ ಹೊತ್ತಿಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಳೆ ನಡುವೆಯೂ ರಾಜ್ಯಾದ್ಯಂತ ತಾಪಮಾನ ಏರಿಕೆ ಆಗಲಿದೆ. ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನವು 40 ಡಿ.ಸೆ ಹೆಚ್ಚಿದ್ದು, ಮುಂದಿನ ಎರಡು ದಿನಗಳು ಇದು ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳುವಂತೆ ತಜ್ಞರು ಮನವಿ ಮಾಡಿದ್ದಾರೆ.
ತಾಪಮಾನ ಏರಿಕೆ ಆದಾಗ ಏನು ಮಾಡಬೇಕು?
- ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ನೀರು ಕುಡಿಯುವುದು. ಸಾಧ್ಯವಾದಷ್ಟು ಹೆಚ್ಚು ನೀರನ್ನು ಕುಡಿಯುವುದು ಒಳ್ಳೆಯದು.
- ಬಿಸಿಲಿನಲ್ಲಿ ಹೋಗುವಾಗ ಕನ್ನಡಕ, ಟೋಪಿ ಅಥವಾ ಛತ್ರಿಯನ್ನು ಬಳಸುವುದು.
- ಮನೆಯಲ್ಲಿದ್ದಾಗ ಆದಷ್ಟು ಫ್ಯಾನ್ಗಳನ್ನು ಬಳಸಿ.
- ಒಆರ್ಎಸ್, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ಮಜ್ಜಿಗೆ ಕುಡಿಯುವುದು ಉತ್ತಮ. ಜತೆಗೆ ಎಳೆನೀರು, ನಿಂಬೆಹಣ್ಣಿ ಜ್ಯೂಸ್ ಸೇವನೆಯು ದೇಹಕ್ಕೆ ಒಳ್ಳೆಯದು.
ಇದನ್ನೂ ಓದಿ: Karnataka CM: ಸಿದ್ದರಾಮಯ್ಯ ಸಿಎಂ ಆಗಲೆಂದು ಯುವಕನಿಂದ 280 ಕಿ.ಮೀ ಪಾದಯಾತ್ರೆ
ಏನು ಮಾಡಬಾರದು?
- ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬೇಡಿ.
- ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬೇಡಿ.
- ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸದೆ ಹೊರಹೋಗಬೇಡಿ.
- ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಿ.
ರಾಜ್ಯದ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ