ಬೆಂಗಳೂರು: ಮುಂದಿನ 3 ದಿನ ಕರ್ನಾಟಕ ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಕರಾವಳಿಯಲ್ಲಿ ನೈರುತ್ಯ ಮುಂಗಾರು (Southwest monsoon) ಚುರುಕಾಗಿದ್ದರೆ, ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಜು.16ರವರೆಗೆ 20 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.
ಕರಾವಳಿಯ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮಲೆನಾಡಿನ ಭಾಗವಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ದಾವಣಗೆರೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬಳ್ಳಾರಿಯಲ್ಲೂ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರನ್ನು ನಡುಗಿಸಲಿದೆ ಮಳೆ
ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನದ ನಂತರ ಭಾರಿ ಮಳೆಯಾಗಲಿದೆ. ಕೆಲವೊಮ್ಮೆ ಗುಡುಗು ಜತೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಬಲವಾದ ಗಾಳಿಯೂ ಬೀಸಲಿದ್ದು, ಜನರನ್ನು ನಡುಗಿಸಲಿದೆ.
ಸಮುದ್ರಕ್ಕೆ ಇಳಿಯುವಂತಿಲ್ಲ
ಜು14ರಂದು ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕರಾವಳಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ.
ಇದನ್ನೂ ಓದಿ: Babies Frock Fashion: ಮಾನ್ಸೂನ್ ಸೀಸನ್‌ಗೆ ಕಾಲಿಟ್ಟ ಕ್ಯೂಟ್ ಬೇಬಿ ಪಾರ್ಟಿ ಫ್ರಾಕ್ಸ್
ವಿಜಯನಗರ, ಕೊಪ್ಪಳದಲ್ಲಿ ಧಾರಾಕಾರ ಮಳೆ
ಗುರುವಾರದಂದು ವಿಜಯನಗರ ಹಾಗೂ ಕೊಪ್ಪಳದಲ್ಲಿ ಧಾರಾಕಾರ ಮಳೆ ಸುರಿದಿದೆ. ವಿಜಯನಗರದಲ್ಲಿ ಬೆಳಗ್ಗೆಯಿಂದ ಜಿಟಿ ಜಿಟಿ ಮಳೆ ಆಗುತ್ತಿತ್ತು. ಸಂಜೆ ಆಗುತ್ತಿದ್ದಂತೆ ಒಂದೆ ಸಮನೇ ಧೋ ಎಂದು ಸುರಿದಿದೆ. ಹೊಸಪೇಟೆ, ಹಂಪಿ, ಕಮಲಾಪುರ, ಮರಿಯಮ್ಮನಹಳ್ಳಿ ಭಾಗದಲ್ಲಿ ಭರ್ಜರಿ ಮಳೆಯಾಗಿದೆ. ರೈತಾಪಿ ವರ್ಗದಲ್ಲೂ ಮಂದಹಾಸ ಮೂಡಿದೆ. ಇತ್ತ ಕೊಪ್ಪಳದಲ್ಲಿ ಮಳೆ ಇಲ್ಲದೆ ಬರದ ಛಾಯೆ ಆವರಿಸಿತ್ತು. ಮಧ್ಯಾಹ್ನದಿಂದ ಸುರಿದ ಮಳೆಗೆ ರೈತರ ಮೊಗದಲ್ಲಿ ಹರ್ಷ ಮೂಡಿಸಿದೆ. ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆಯಲ್ಲಿ ನೀರು ನಿಂತಿತ್ತು. ಭಾರಿ ಮಳೆಗೆ ಚರಂಡಿ ನೀರು ರಸ್ತೆಗೆ ಬಂದಿದ್ದರಿಂದ ಕೆರೆಯಂತಾಗಿತ್ತು. ಅಲ್ಲಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ