ಬೆಂಗಳೂರು: ರಾಜ್ಯಾದ್ಯಂತ ಮಳೆರಾಯ (Rain News) ತಣ್ಣಗಾಗಿದ್ದು, ಆಗಸ್ಟ್ 24ರಂದು ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಅತಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ, ಉತ್ತರ ಒಳನಾಡಲ್ಲಿ ಲಘು ಮಳೆ
ದಕ್ಷಿಣ ಒಳನಾಡಿನ ಜಿಲ್ಲೆಯಾದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ. ಉಳಿದ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ.
ಉತ್ತರ ಒಳನಾಡಿ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿಒಣಹವೆ ಇರಲಿದೆ.
ಮಲೆನಾಡು, ಕರಾವಳಿಯಲ್ಲಿ ಹಗುರ ಮಳೆ
ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾದರೆ, ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.
ಬೆಂಗಳೂರಲ್ಲಿ ಬಿಸಿ ಹವೆ
ಬೆಂಗಳೂರು ವ್ಯಾಪ್ತಿಯಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಬಿಸಿ ಹವೆ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನೈರುತ್ಯ ಮುಂಗಾರು ಮಂಗಳವಾರದಂದು ದುರ್ಬಲಗೊಂಡಿತ್ತು. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದರೆಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡದ ಕ್ಯಾಸಲ್ ರಾಕ್ ಹಾಗೂ ಉಡುಪಿಯ ಕುಂದಾಪುರದಲ್ಲಿ ತಲಾ 1ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ