Site icon Vistara News

ಪ್ರವೀಣ್‌ ನೆಟ್ಟಾರು ಪತ್ನಿಗೆ ಮುಖ್ಯಮಂತ್ರಿ ಸಚಿವಾಲಯದಲ್ಲಿ ಉದ್ಯೋಗ ನೀಡಿದ ಸರಕಾರ, 30,350 ರೂ. ವೇತನ

Praveen Nettaru

ಬೆಂಗಳೂರು: ದುಷ್ಕರ್ಮಿಗಳಿಂದ ಕೊಲೆಯಾದ ಬಿಜೆಪಿ ಯುವಮೋರ್ಚಾ ಪದಾಧಿಕಾರಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಅವರ ಪತ್ನಿಗೆ ರಾಜ್ಯ ಸರಕಾರ ಉದ್ಯೋಗ ನೀಡಿ ಆದೇಶ ಹೊರಡಿಸಿದೆ.
ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಸಚಿವಾಲಯದಲ್ಲಿ ಉದ್ಯೋಗ ನೀಡಲಾಗಿದೆ.

ಅವರನ್ನು ಗ್ರೂಪ್‌ ಸಿ ಹುದ್ದೆಗೆ ನೇಮಕಗೊಳಿಸಲಾಗಿದ್ದು, ೩೦,350 ರೂ. ವೇತನ ನಿಗದಿಪಡಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಣಿಕ್ಕಾರು ಅಂಚೆ ವ್ಯಾಪ್ತಿಗೆ ಬರುವ ಬೆಳ್ಳಾರೆ ಗ್ರಾಮದ ನೆಟ್ಟಾರು ಹೌಸ್‌ ನಿವಾಸಿಯಾದ ದಿ. ಪ್ರವೀಣ್‌ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರನ್ನು ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಹಿರಿಯ ಸಹಾಯಕ ಹುದ್ದೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಿಸುವಂತೆ ಮುಖ್ಯಮಂತ್ರಿಯವರು ಆದೇಶಿಸಿದ್ದಾರೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

ಸೆಪ್ಟೆಂಬರ್‌ ೨೨ರಂದು ಜಾರಿಗೆ ಬರುವಂತೆ ಈ ನೇಮಕಾತಿಯನ್ನು ಪ್ರಕಟಿಸಲಾಗಿದ್ದು, ಮುಂದಿನ ಎರಡು ತಿಂಗಳ ಒಳಗಾಗಿ ಶೈಕ್ಷಣಿಕ ದಾಖಲೆಗಳು ಮತ್ತು ಅಂಕಪಟ್ಟಿಗಳ ದೃಢೀಕರಣ ಮಾಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಈ ಹುದ್ದೆಯ ಅವಧಿಯು ಈಗ ಇರುವ ಮುಖ್ಯಮಂತ್ರಿಗಳ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ನೇಮಿಸಿದೆ.

ರಾತ್ರಿ ೮ ಗಂಟೆಯ ಹೊತ್ತಿಗೆ ನಡೆದಿತ್ತು ಕೊಲೆ
ಬೆಳ್ಳಾರೆ ಪರಿಸರದಲ್ಲಿ ಹಿಂದೂ ಸಂಘಟನೆಯ ಸಕ್ರಿಯ ನಾಯಕರಾಗಿ ಗಮನ ಸೆಳೆದಿದ್ದ ಪ್ರವೀಣ್‌ ನೆಟ್ಟಾರು ಅವರನ್ನು ಜುಲೈ ೨೬ರಂದು ಮೂವರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಕೊಲೆ ಮಾಡಿ ಪರಾರಿಯಾಗಿದ್ದರು. ಕೊಲೆ ಸಂಬಂಧ ಪಿಎಫ್‌ಐ ಸಂಘಟನೆ ಜತೆ ಸಂಪರ್ಕ ಹೊಂದಿದ್ದಾರೆನ್ನಲಾದ ೧೦ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ಈ ನಡುವೆ, ಹಿಂದೂ ಕಾರ್ಯಕರ್ತರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲ ಎಂದು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಜನಸ್ಪಂದನಾ ಸಭೆಯಲ್ಲಿ ಭರವಸೆ
ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಸರಕಾರದ ಸಾಧನಾ ಸಮಾವೇಶವಾದ ಜನಸ್ಪಂದನಾ ಕಾರ್ಯಕ್ರಮದಲ್ಲಿ ನೆಟ್ಟಾರು ಅವರ ಪತ್ನಿಗೆ ಮುಖ್ಯಮಂತ್ರಿಗಳ ಕಚೇರಿಯಲ್ಲೇ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಪ್ರಕಟಿಸಿದ್ದರು.

ಇದನ್ನೂ ಓದಿ | Praveen Nettaru | ಗೃಹ ಸಚಿವರ ಮನೆಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ, ರಾಜೀನಾಮೆಗೆ ಒತ್ತಾಯ

Exit mobile version