Site icon Vistara News

CM Siddaramaiah: ನನ್ನನ್ನು ರಾಷ್ಟ್ರಪತಿ, ಪ್ರಧಾನಿ ಮಾಡ್ತೀನಿ ಅಂದ್ರೂ ಬಿಜೆಪಿ ಕಡೆ ತಲೆ ಹಾಕಲ್ಲ: ಸಿಎಂ ಸಿದ್ದರಾಮಯ್ಯ

Siddaramaiah

Lok Sabha Election 2024: Siddaramaiah In Do Or Die Situation In Mysore, Chamarajanagar

ಮೈಸೂರು: ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು. ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ಮಾಡುವ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ‌ ನಡೆದ ಪರಿಶಿಷ್ಟ ಜಾತಿ, ವರ್ಗಗಳ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಮತಯಾಚಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮಗೆ ಸೈದ್ಧಾಂತಿಕ ಸ್ಪಷ್ಟತೆ ಇದ್ದಾಗ ಮಾತ್ರ ರಾಜಕೀಯ ಶಕ್ತಿ ಬರುತ್ತದೆ. ಬಿಜೆಪಿ – ಆರ್‌ಎಸ್‌ಎಸ್‌ ಕಡೆ ತಲೆ ಹಾಕಬೇಡಿ. ಶೂದ್ರರಿಗೆ-ದಲಿತರಿಗೆ-ಮಹಿಳೆಯರಿಗೆ ಆರ್‌ಎಸ್‌ಎಸ್‌ ಗರ್ಭಗುಡಿಯೊಳಗೆ ಪ್ರವೇಶವನ್ನೇ ಕೊಡಲ್ಲ. ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ಎಚ್‌.ಡಿ. ದೇವೇಗೌಡರು‌ ಈಗ ಮೋದಿಗೂ‌ ತಮಗೂ‌ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ರಾಜಕಾರಣಿಯಾದವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು ಎಂದರು.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ. ಹೀಗಾಗಿ ಮೀಸಲಾತಿಯನ್ನು ಇಷ್ಟಪಡುವುದಿಲ್ಲ. ಮೀಸಲಾತಿ ಎನ್ನುವುದು ಭಿಕ್ಷೆಯಲ್ಲ. ಅದು ಶೋಷಿತ ಜನ ಸಮುದಾಯಗಳ ಹಕ್ಕು. ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇದ್ದೇ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

CM Siddaramaiah and Kodagu Mysore Lok Sabha constituency congress Election campaign

ಮತ್ತೆ ಮನುಸ್ಮೃತಿ ತರಬೇಕು ಎನ್ನುವ ಹುನ್ನಾರ

ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರಿಗೂ ಮೊದಲು ಓದುವ ಹಕ್ಕು ನಮಗೆ ಅಂದರೆ ಶೂದ್ರರಿಗೆ ಇತ್ತಾ? ಮಹಿಳೆಯರಿಗೆ ಇತ್ತಾ? ಪತಿ ಮೃತಪಟ್ಟ ತಕ್ಷಣ ಪತ್ನಿ ಕೂಡ ಬೆಂಕಿಗೆ ಆಹುತಿ ಆಗಬೇಕಿತ್ತು. ಇಂಥ ಮನುಸ್ಮೃತಿ ಪ್ರೇರಿತ ಅಮಾನವೀಯ ಪದ್ಧತಿ ರದ್ದಾಗಿದ್ದು ನಮ್ಮ ಸಂವಿಧಾನದಿಂದ. ಹೀಗಾಗಿ ಈ ಸಂವಿಧಾನ ಬದಲಾಯಿಸಿ ಮತ್ತೆ ಮನುಸ್ಮೃತಿ ತರಬೇಕು ಎನ್ನುವುದು ಅವರ ಹುನ್ನಾರ. ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶೂದ್ರರನ್ನು ಬಳಸಿಕೊಳ್ತಾರೆ ಅಷ್ಟೇ

ಶೂದ್ರರಿಗೆ, ದಲಿತರಿಗೆ ಮತ್ತು ಮಹಿಳೆಯರಿಗೆ ಗರ್ಭಗುಡಿಯೊಳಗೆ ಬಿಟ್ಟುಕೊಳ್ಳಲ್ಲ. ನಂಜೇಗೌಡರು ಅಂತ ಹಿರಿಯ ಬಿಜೆಪಿ ನಾಯಕರು ಮತ್ತು ಈಗಿನ ಬಿಜೆಪಿ ನಾಯಕ ಗೂಳಿಹಟ್ಟಿ ಶೇಖರ್ ಅವರು ಕೂಡ ತಮ್ಮನ್ನು ಆರ್‌ಎಸ್‌ಎಸ್‌ ಗರ್ಭಗುಡಿಯೊಳಗೆ ಬಿಟ್ಟುಕೊಳ್ಳಲ್ಲ ಅಂತ ಬಹಿರಂಗವಾಗಿ ಹೇಳಿದ್ದಾರೆ. ಇದು ಸತ್ಯ. ಹೀಗಾಗಿ ಶೂದ್ರರನ್ನು ಕೇವಲ ಬಳಸಿಕೊಳ್ತಾರೆ ಅಷ್ಟೇ. ಆದ್ದರಿಂದ ಆರ್‌ಎಸ್‌ಎಸ್‌ ಕಡೆ ಶೂದ್ರರು, ದಲಿತರು, ಮಹಿಳೆಯರು ತಲೆ ಕೂಡ ಹಾಕಬಾರದು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.

ಜೆಡಿಎಸ್‌ನ ಟೀಕಿಸಬಾರದಾ?

ಇಂಥ ಆರ್‌ಎಸ್‌ಎಸ್‌ ಜತೆ ಜೆಡಿಎಸ್‌ ಸೇರಿಕೊಂಡಿದೆಯಲ್ಲಾ, ಇದನ್ನು ಟೀಕಿಸಬಾರದಾ? ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಹಣ ಮೀಸಲಿಡುವ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಅಭಿವೃದ್ಧಿ ಹಣದಲ್ಲಿ ಶೇ. 24.1 ಹಣ ಮೀಸಲಿಡಬೇಕು ಎನ್ನುವ ಕಾನೂನನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರ. ಈ ಪ್ರಗತಿಪರ ಕಾನೂನನ್ನು ಇಡಿ ದೇಶದಲ್ಲಿ ಬಿಜೆಪಿಯ ಯಾವ ಸರ್ಕಾರವೂ ಜಾರಿ ಮಾಡಿಲ್ಲ. ಮಾಡಿರುವುದು ನಮ್ಮ ಕಾಂಗ್ರೆಸ್ ಸರ್ಕಾರ ಮಾತ್ರ. ಇದನ್ನೆಲ್ಲ ಜನ ಸಮುದಾಯ ತಿಳಿದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

CM Siddaramaiah and Kodagu Mysore Lok Sabha constituency congress Election campaign

ಇದನ್ನೂ ಓದಿ: Lok Sabha Election 2024: ದಕ್ಷಿಣ ಕನ್ನಡ ಕಾಂಗ್ರೆಸ್‌ ಅಭ್ಯರ್ಥಿಗೆ ಮೈತುಂಬಾ ಸಾಲ!

ಗುತ್ತಿಗೆಯಲ್ಲಿ ದಲಿತರಿಗೆ ಮೀಸಲಾತಿ ತಂದಿದ್ದು ನಮ್ಮ ಕಾಂಗ್ರೆಸ್ ಸರ್ಕಾರ

ಗುತ್ತಿಗೆಯಲ್ಲಿ ದಲಿತರಿಗೆ ಮೀಸಲಾತಿ ತಂದಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಮಂಡಲ್ ವರದಿಯನ್ನು ವಿರೋಧಿಸಿದ್ದು, ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ವಿರೋಧಿಸಿದ್ದು ಇದೇ ಬಿಜೆಪಿ ತಾನೇ? SCP/ TSP ಕಾಯ್ದೆಯನ್ನು ಜಾರಿ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಹೀಗಾಗಿ ನಿಮ್ಮನ್ನು ಭಾವನಾತ್ಮಕವಾಗಿ ಕೆರಳಿಸಿ, ನಿಮ್ಮ ಬದುಕಿಗೆ ಕೊಳ್ಞಿ ಇಡುವವರ ಜತೆ ಸೇರದೆ, ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಮತ್ತು ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ಸೇರಿ ಹಲವು ನಾಯಕರು, ಕೆಪಿಸಿಸಿಯ ಎಸ್.ಸಿ/ಎಸ್.ಟಿ ವಿಭಾಗದ ಮುಖಂಡರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Exit mobile version