ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದ ಸರ್ಕಾರಿ ಶಾಲೆ ಮಕ್ಕಳು ಶಾಲೆಗೆ ಚಕ್ಕರ್ ಹಾಕಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದ ರಸ್ತೆ ದುರಸ್ತಿ ಮಾಡಿಸಿ ಎಂದು ಮೊರೆ ಇಟ್ಟಿದ್ದಾರೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಹಾಳಾಗಿದ್ದು, ಕೂಡಲೇ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು, ಗ್ರಾಮಸ್ಥರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಸತತ ಮಳೆಯಿಂದ ಹಾಲಗೇರಾ ಗ್ರಾಮದ ಅಂಬೇಡ್ಕರ್ ನಗರದಲ್ಲಿನ ಸರ್ಕಾರಿ ಶಾಲೆಗೆ ತೆರಳುವ ರಸ್ತೆ ಗುಂಡಿಮಯವಾಗಿ, ಕೆಸರು ಗದ್ದೆಯಂತಾಗಿದೆ. ಇಂತಹ ರಸ್ತೆಯಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ವಾಹನಗಳು ಓಡಾಡಲು ಪರದಾಡುವಂತಾಗಿದೆ. ಹೀಗಾಗಿ ಅಧಿಕಾರಿಗಳು ಈ ಕೂಡಲೇ ರಸ್ತೆ ದುರಸ್ತಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹಗಳು ವ್ಯಕ್ತವಾಗಿವೆ.
ರಸ್ತೆ ಸರಿಪಡಿಸುವಂತೆ ಹಲವು ದಿನಗಳಿಂದ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳು ರಸ್ತೆ ದುರಸ್ತಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ | ರಾಗಿ ಕಳವು ವಿವಾದ | ಆಣೆ ಪ್ರಮಾಣ ಇಲ್ಲ, ಧರ್ಮಸ್ಥಳದಲ್ಲಿ ಸತ್ಯ ನಿವೇದನೆ ಮಾಡಿದ ಶಾಸಕ ಶಿವಲಿಂಗೇಗೌಡ