ಯಾದಗಿರಿ: ಕುಡಿಯುವ ನೀರಿನ (Drinking Water) ಸಮಸ್ಯೆಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸುಶೀಲ ಬಿ. ಕಟ್ಟುನಿಟ್ಟಿನ ಸೂಚನೆ (Yadgiri News) ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಮುಂಜಾಗ್ರತೆ ವಹಿಸುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು,
ಗ್ರಾಮೀಣ ಮತ್ತು ನಗರದ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ, ಗ್ರಾಮದ ಅಭಿವೃದ್ಧಿ ಅಧಿಕಾರಿಗಳು, ನಗರದ ಮುಖ್ಯಾಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಗೆ ತ್ವರಿತಗತಿಯಲ್ಲಿ ಸ್ಪಂದಿಸಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದನ್ನೂ ಓದಿ: Karnataka Weather : ಉತ್ತರ ಕರ್ನಾಟಕದಲ್ಲಿ ಸುರಿದ ಭಾರಿ ವರ್ಷಧಾರೆ; ನಾಳೆ ರಭಸವಾಗಿ ಬೀಸಲಿದೆ ಗಾಳಿ- ಮಳೆ
ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅವಶ್ಯಕ ಮುಂಜಾಗ್ರತೆ ವಹಿಸಲು ಡಿಸಿ ಸಲಹೆ ನೀಡಿದರು.
ನೀರು ಸರಬರಾಜಿಗೆ ಸಂಬಂಧಿಸಿದಂತೆ ತಾಂತ್ರಿಕ ಸಮಸ್ಯೆ ಉದ್ಭವಿಸಿದ್ದಲ್ಲಿ ತಕ್ಷಣ ಆದ್ಯತೆ ಮೇಲೆ ದುರಸ್ತಿ ಕಾರ್ಯ ಕೈಗೊಂಡು ನೀರು ಸರಬರಾಜಿನಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು. ನಿಯಮಿತವಾಗಿ ಟ್ಯಾಂಕ್ ಪರಿಶೀಲನೆ ನಡೆಸಿ, ನೀರು ಪೂರೈಕೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಟೆಂಡರ್ ಪ್ರಕ್ರಿಯೆಗಳ ಸಮಸ್ಯೆಯನ್ನು ತಕ್ಷಣ ಬಗೆಹರಿಸಿಕೊಳ್ಳಬೇಕು. ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಅನುಮೋದನೆ ಪಡೆದು ಕ್ರಮ ಕೈಗೊಳ್ಳಬೇಕು. ದುರಸ್ತಿ ಇರುವ ಪೈಪ್‌ಲೈನ್‌ಗಳನ್ನು ತಕ್ಷಣ ದುರಸ್ತಿಗೊಳಿಸಿ, ನೀರು ಪೋಲು ಆಗದಂತೆ ಎಚ್ಚರಿಕೆವಹಿಸಬೇಕು.
ವಿವಿಧ ಜಲಾಶಯ ಹಾಗೂ ನದಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪಂಪ್‌ಸೆಟ್‌ಗಳ ಮೂಲಕ ನೀರು ಎತ್ತುವುದನ್ನು ತಡೆಯಬೇಕು. ಆಯಾ ತಹಸೀಲ್ದಾರರು, ವಿದ್ಯುತ್ ಇಲಾಖೆಯ ಅಧಿಕಾರಿಗಳು ತಕ್ಷಣ ಹಾಗೂ ತೀವ್ರ ನಿಗಾ ಇಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ, ಯಾವುದೇ ಪರಿಸ್ಥಿತಿಯಲ್ಲಿ ಜನ-ಜಾನವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಅವರು ಸೂಚನೆ ನೀಡಿದರು.
ಇದನ್ನೂ ಓದಿ: Iran- Israel war : ಇಸ್ರೆಲ್, ಇರಾನ್ಗೆ ಹೋಗದಂತೆ ವಿಶೇಷ ಸೂಚನೆ ನೀಡಿದ ಭಾರತ ಸರ್ಕಾರ; ಯಾಕೆ ಗೊತ್ತೇ?
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಗರಿಮಾ ಪನ್ವಾರ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಪ್ರಕಾಶ ಕುದುರಿ, ತಹಸೀಲ್ದಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.