ಬೆಂಗಳೂರು: ಕರ್ನಾಟಕ ರಾಜ್ಯ ಎಂದು ನಾಮಕರಣಗೊಂಡು ಇದೇ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಇಡೀ ವರ್ಷ ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಆಯೋಜಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ (Karnataka Budget 2023) ಘೋಷಣೆ ಮಾಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕುರಿತು ಉಲ್ಲೇಖಿಸುವ ಆರಂಭದಲ್ಲಿ ದ.ರಾ. ಬೇಂದ್ರೆ ಅವರ ಸಾಲುಗಳನ್ನು ಉಲ್ಲೇಖಿಸಿದರು. “ಒಂದೇ ಒಂದೇ ಒಂದೇ ಕರ್ನಾಟಕವೊಂದೇ, ಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇ, ಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೆ” ಎಂದರು.
ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣವಾಗಿ 1ನೇ ನವೆಂಬರ್, 2023ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ ʻಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡʼ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕದ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ, ಹಾಗೂ ನಾಡು-ನುಡಿಗೆ ಸಂಬಂಧಿಸಿದಂತೆ ಮತ್ತು ಯುವಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಘೋಷಣೆಗಳು
- ಕನ್ನಡ ಸಾಹಿತ್ಯ ಲೋಕಕ್ಕೆ ಸಲ್ಲಿಸಿದ ಅನುಪಮ ಸೇವೆಯನ್ನು ಸ್ಮರಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಎಂ. ಎಂ. ಕಲಬುರಗಿ ಅವರ ಹೆಸರಿನಲ್ಲಿ ಒಂದು ಟ್ರಸ್ಟ್ ಅನ್ನು ಸ್ಥಾಪಿಸಲಾಗುವುದು.
- ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರತಿಷ್ಠಾನದ ಮೂಲಕ ಅವರ ಸಾಹಿತ್ಯ ಹಾಗೂ ಪರಿಸರ ಸಂರಕ್ಷಣೆಯ ಚಿಂತನೆಗಳನ್ನು ಯುವಜನಾಂಗಕ್ಕೆ ಪರಿಚಯಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಎರಡು ಕೋಟಿ ರೂ. ಗಳನ್ನು ಒದಗಿಸಲಾಗುವುದು.
- ನಮ್ಮ ರಾಜ್ಯದ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಲು ಮತ್ತು ಯುವ ಪೀಳಿಗೆಗೆ ಪರಿಚಯಿಸಲು ಪ್ರಮುಖ ಪಾತ್ರವಹಿಸುತ್ತಿರುವ ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ ಎರಡು ಕೋಟಿ ರೂ. ಅನುದಾನ ನೀಡಲಾಗುವುದು. ಇದೇ ಮಾದರಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಜಿಲ್ಲೆಯಲ್ಲಿ ಜಾನಪದ ಲೋಕ ಸ್ಥಾಪನೆ ಮಾಡಲಾಗುವುದು.
- ಬಂಜಾರ ಸಮುದಾಯದ ಸಾಂಸ್ಕೃತಿಕ ಮತ್ತು ಜಾನಪದ ನೃತ್ಯ ಕಲೆಗಳು ನಶಿಸಿ ಹೋಗುತ್ತಿರುವ ಕಾರಣ ಅವರ ಸಂಸ್ಕೃತಿಯನ್ನು ಬೆಳೆಸುವ ಹಾಗೂ ಉಳಿಸುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.
- ಕರ್ನಾಟಕದ ಬುಡಕಟ್ಟು ಸಮುದಾಯದ ಜನರ ಕಲಾಪ್ರತಿಭೆಯನ್ನು ಪರಿಚಯಿಸುವ ಹಿತದೃಷ್ಟಿಯಿಂದ ಮತ್ತು ಅವರ ಸಂಸ್ಕೃತಿ, ಜಾನಪದ ವೈದ್ಯ ಪದ್ಧತಿ, ಜಾನಪದ ಕಲೆಗಳ ಪ್ರದರ್ಶನ, ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದಕ್ಕೆ ಉತ್ತೇಜನ ನೀಡಲು ಬುಡಕಟ್ಟು ಜನಾಂಗದ ಕಲಾವಿದರ ಸಮಾವೇಶವನ್ನು ಆಯೋಜಿಸಲಾಗುವುದು.
ಯುವಸಬಲೀಕರಣ ಮತ್ತು ಕ್ರೀಡೆ - ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯವುಳ್ಳ ರಾಜ್ಯದ ಕ್ರೀಡಾಪಟುಗಳನ್ನು ತಯಾರಿಸಲು ಬೆಂಗಳೂರಿನಲ್ಲಿ ಬಾಸ್ಕೆಟ್ಬಾಲ್ ಪ್ರಾದೇಶಿಕ ತರಬೇತಿ ಕೇಂದ್ರ ಮತ್ತು ಮೈಸೂರಿನಲ್ಲಿ ಸೈಕ್ಲಿಂಗ್ ವೇಲೋಡ್ರೋಮ್ ಅನ್ನು ತಲಾ 10 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
- ಕ್ರೀಡಾ ಚಟುವಟಿಕೆಗಳಲ್ಲಿ ವಿಶೇಷಚೇತನರ ಮತ್ತು ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಅಗತ್ಯವಾದ ಮೂಲಭೂತ ಸೌಕರ್ಯಗಳು ಮತ್ತು ನುರಿತ ತರಬೇತುದಾರರ ಸೇವೆಯನ್ನು ಒದಗಿಸಲು 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
- ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲು ಐದು ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು ಮತ್ತು ಕ್ರೀಡಾಪಟುಗಳಿಗೆ ತಂಗಲು ಅನುಕೂಲವಾಗುವಂತೆ ಸುಸಜ್ಜಿತವಾದ ಕ್ರೀಡಾ ವಸತಿ ನಿಲಯವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು. ಇದಕ್ಕಾಗಿ 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
- ಒಲಂಪಿಕ್ ಹಾಗೂ ಪ್ಯಾರಾಲಿಂಪಿಕ್ ವಿಜೇತರಿಗೆ ಗ್ರೂಪ್ ಎ ಹುದ್ದೆ ಮತ್ತು ಏಷಿಯನ್ ಹಾಗೂ ಕಾಮನ್ ವೆಲ್ತ್ ಕ್ರೀಡಾ ವಿಜೇತರಿಗೆ ಗ್ರೂಪ್-ಬಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಪ್ರಸಕ್ತ ಸಾಲಿನಿಂದ ಕ್ರಮಕೈಗೊಳ್ಳಲಾಗುವುದು.
- ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಶೇ. 3 ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು.
- ಕರ್ನಾಟಕ ಈಜು ಅಸೋಸಿಯೇಷನ್ ಸಹಭಾಗಿತ್ವದಲ್ಲಿ ರಾಜ್ಯದ ಪ್ರತಿಭಾವಂತ ಈಜು ಕ್ರೀಡಾಪಟುಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಯಶಸ್ವಿಯಾಗಿ ಭಾಗವಹಿಸಲು ತರಬೇತಿಯನ್ನು ನೀಡುವ ಸಲುವಾಗಿ ಮುಂದಿನ ಐದು ವರ್ಷಗಳವರೆಗೆ ಪ್ರತಿ ವರ್ಷ ಎರಡು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.