ಬೆಂಗಳೂರು: ರಾಜ್ಯದ ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ದಿನದ ಆರಂಭದಲ್ಲಿ ಹತ್ತು ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಬೇಕು (Yoga Education) ಎಂದು ರಾಜ್ಯ ಶಿಕ್ಷಣ ಇಲಾಖೆ ಆದೇಶ ನೀಡಿದ ಬೆನ್ನಿಗೇ ಈಗ ವಿಶ್ವವಿದ್ಯಾಲಯ ಅನುದಾನ ಆಯೋಗವು ಇದನ್ನು ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ವಿಸ್ತರಿಸಿ ಸುತ್ತೋಲೆ ಹೊರಡಿಸಿದೆ.
ಧ್ಯಾನ ಗುದ್ದಾಟ
ಶಾಲಾ-ಕಾಲೇಜಿನಲ್ಲಿ ಧಾನ್ಯದ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಗುದ್ದಾಟವೂ ನಡೆದಿತ್ತು. ಇದೇ ಸಂದರ್ಭದಲ್ಲಿ ಸರಕಾರ ನಿರ್ಮಿಸಲು ಉದ್ದೇಶಿಸಿರುವ ವಿವೇಕ ಕೊಠಡಿಗಳ ಬಣ್ಣದ ಬಗ್ಗೆಯೂ ಚರ್ಚೆ ನಡೆದಿತ್ತು. ಶಾಲಾ ಕಾಲೇಜುಗಳಲ್ಲಿ ಧ್ಯಾನ ಮಾಡಲು ಅನುಮತಿ ನೀಡಿದ ಬೆನ್ನಲ್ಲೇ ಉನ್ನತ ಶಿಕ್ಷಣದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಧ್ಯಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಿಂದ ವಿವಿ ಕುಲಪತಿಗಳಿಗೆ ಮತ್ತು ಪ್ರಾಂಶುಪಾಲರಿಗೆ ಪತ್ರ ಬರೆದಿದ್ದು, ಆರ್ಟ್ ಆಫ್ ಲಿವಿಂಗ್ ಸಹಯೋಗದೊಂದಿಗೆ ಧ್ಯಾನ ಕಾರ್ಯ ಮಾಡುವಂತೆ ಸೂಚನೆ ನೀಡಲಾಗಿದೆ.
ಸುತ್ತೋಲೆಯಲ್ಲಿ ಏನಿದೆ?
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸಂಸ್ಕೃತಿ ಇಲಾಖೆಯು ಸಮಾಜದ ಎಲ್ಲರಿಗೂ ಯೋಗ ತಿಳುವಳಿಕೆ ಮೂಡಿಸುವ ಸಲುವಾಗಿ ʻಹರ್ ಘರ್ ಧ್ಯಾನ್ʼ ಎಂಬ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಆರ್ಟ್ ಆಫ್ ಲಿವಿಂಗ್‌ನ ಮುಖ್ಯಸ್ಥರಾಗಿರುವ ಶ್ರೀ ಶ್ರೀ ರವಿಶಂಕರ್ ಅವರು ಅಭಿವೃದ್ಧಿಪಡಿಸಿರುವ ಮಾರ್ಗದರ್ಶಿ ಯೋಗವನ್ನು ಅನುಸರಿಸಲು ಸೂಚಿಸಲಾಗಿತ್ತು.
ಇದೀಗ ವಿಶ್ವವಿದ್ಯಾಲಯಗಳು ತಮ್ಮ ಅಡಿಯಲ್ಲಿ ಬರುವ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲಿ ಧ್ಯಾನಕ್ಕೆ ಅವಕಾಶ ಮಾಡಿಕೊಡಬೇಕು. ಕಾಲೇಜಿನಲ್ಲಿ ಒಬ್ಬ ಹಿರಿಯ ಸಿಬ್ಬಂದಿಯನ್ನು ಯಫಗ ರಾಯಭಾರಿ ಎಂದು ನೇಮಿಸಬೇಕು ಎಂದು ಸೂಚಿಸಿದೆ.
ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ದೃಢತೆ ವೃದ್ಧಿ
ರಾಜ್ಯದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಪ್ರತಿ ದಿನ ಧ್ಯಾನವನ್ನು ಮಾಡಿಸುವುದು ಸಹಕಾರಿಯಾಗಲಿದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಳ್ಳಬಹುದು ಎಂಬುದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶಯವಾಗಿದೆ.
ರಾಜ್ಯದ ಎಲ್ಲ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ 10 ನಿಮಿಷ ಕಾಲ ಧ್ಯಾನ ಮಾಡಿಸಲು ಅಗತ್ಯ ಕ್ರಮ ವಹಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಪತ್ರ ಬರೆದು ಶಾಲೆಗಳಲ್ಲಿ ಮಕ್ಕಳಿಗೆ ಧ್ಯಾನ ಮಾಡಿಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಸಚಿವರು ಕ್ರಮ ಕೈಗೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ | ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಧ್ಯಾನ ಮಾಡಿಸಲು ಶಿಕ್ಷಣ ಸಚಿವರ ಸೂಚನೆ