Site icon Vistara News

Youth Festival | ಮೋದಿ ಕಾರ್ಯಕ್ರಮಕ್ಕೆ ಪ್ರತಿ ಕಾಲೇಜಿನಿಂದ 100 ವಿದ್ಯಾರ್ಥಿಗಳನ್ನು ಕರೆತರಬೇಕು ಎಂಬ ಸುತ್ತೋಲೆ ವಾಪಸ್‌

Youth Festival

ಹುಬ್ಬಳ್ಳಿ: ಸಾರ್ವಜನಿಕರಿಂದ ವ್ಯಾಪಕ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸುವ ʼರಾಷ್ಟ್ರೀಯ ಯುವ ಜನೋತ್ಸವʼಕ್ಕೆ (Youth Festival) ನಗರದ ಪದವಿ ಪೂರ್ವ ಕಾಲೇಜುಗಳಿಂದ ಕನಿಷ್ಠ ೧೦೦ ವಿದ್ಯಾರ್ಥಿಗಳನ್ನು ಕರೆತರಬೇಕು ಎಂದು ಹೊರಡಿಸಿದ್ದ ಸುತ್ತೋಲೆಯನ್ನು ಧಾರವಾಡ ಪದವಿ ಪೂರ್ವ ಶಿಕ್ಷಣ ಇಲಾಖೆ ವಾಪಸ್‌ ಪಡೆದಿದೆ.

ಸ್ವಾಮಿ ವಿವೇಕಾನಂದ ಅವರ ಜನ್ಮ ದಿನದ ಅಂಗವಾಗಿ 26ನೇ ರಾಷ್ಟ್ರೀಯ ಯುವಜನೋತ್ಸವವನ್ನು ಹುಬ್ಬಳ್ಳಿಯ ಕೇಶ್ವಾಪುರದ ರೈಲ್ವೆ ಮೈದಾನದಲ್ಲಿ ಜ.12ರಿಂ 16ರವರೆಗೆ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮವಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ನಗರ ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಿಂದ ಕನಿಷ್ಠ 100 ವಿದ್ಯಾರ್ಥಿಗಳನ್ನು ಕರೆ ತರುವಂತೆ ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು.

ಇದನ್ನೂ ಓದಿ | K Srinivasa Gowda | ಶ್ರೀನಿವಾಸ ಗೌಡ ಲಾಭವಿಲ್ಲದೆ ಕ್ಷೇತ್ರ ತ್ಯಾಗ ಮಾಡಿದ್ದಾರಾ ಎಂದು ಕೇಳಿದ ಬಿಜೆಪಿ ರವಿ ಕುಮಾರ್‌; ಸಿದ್ದರಾಮಯ್ಯ ಮೌನ

ಈ ಸುತ್ತೋಲೆಗೆ ವ್ಯಾಪಕ ಟೀಕೆಗಳು ಕೇಳಿಬಂದಿದ್ದರಿಂದ ಧಾರವಾಡ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ವಾಪಸ್‌ ಪಡೆದಿದೆ. ಈ ಹಿಂದೆ ನವೆಂಬರ್‌ ೧೧ರಂದು ಪ್ರಧಾನಿ ಮೋದಿ ಅವರು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಯೋಜಿಸಿದ್ದ ಕೆಂಪೇಗೌಡ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ಕಾಯಕ್ರಮಕ್ಕೂ ನಿಗದಿತ ಸಂಖ್ಯೆಯ ವಿದ್ಯಾರ್ಥಿಗಳನ್ನು ಕರೆತರಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಡಿಪಿಯು ಸುತ್ತೋಲೆ ಹೊರಡಿಸಿದ್ದರು. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುತ್ತೋಲೆ ಹಿಂಪಡೆಯಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಧ್ಯಾಹ್ನ 3:45ಕ್ಕೆ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ‌. ನಂತರ ರಸ್ತೆ ಮಾರ್ಗವಾಗಿ ರೈಲ್ವೆ ಮೈದಾನಕ್ಕೆ ತೆರಳಲಿದ್ದಾರೆ. ಪ್ರಧಾನಿ ಸಾಗುವ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಗೋಕುಲ ರಸ್ತೆ, ಹೊಸೂರು, ಹಳೇ ಕೋರ್ಟ್ ಸರ್ಕಲ್, ದೇಶಪಾಂಡೆ ನಗರದ ಮಾರ್ಗವಾಗಿ ಕೇಶ್ವಾಪುರ ರೈಲ್ವೇ ಮೈದಾನದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ನಾಲ್ಕು ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸಂಜೆ 4 ಗಂಟೆಗೆ ಯುವಜನೋತ್ಸವ ವೇದಿಕೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.

ನಾಳೆ ಪಿಯುಸಿ, ಪದವಿ ಕಾಲೇಜುಗಳಿಗೆ ರಜೆ ಇಲ್ಲ

ಧಾರವಾಡ: ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಜನ ಹಾಗೂ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮಕ್ಕಳಿಗೆ ತೊಂದರೆಯಾಗಬಾರದು ಎಂದು ಹುಬ್ಬಳ್ಳಿ ನಗರದ 1 ರಿಂದ 10ನೇ ತರಗತಿ ವರೆಗಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜ.12ರಂದು ರಜೆ ಘೋಷಿಸಲಾಗಿದೆ. ಆದರೆ, ಎಂದಿನಂತೆ ಪಿಯುಸಿ ಮತ್ತು ಪದವಿ ಕಾಲೇಜುಗಳ ತರಗತಿಗಳು ನಡೆಯುತ್ತವೆ, ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದ್ದಾರೆ.

ಇದನ್ನೂ ಓದಿ | Textile Park | 25 ತಾಲೂಕುಗಳಲ್ಲಿ ಮಿನಿ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

Exit mobile version