ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಝಿಕಾ ವೈರಸ್ (Zika Virus) ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸದ್ಯ ಯಾರೂ ಭಯಪಡುವುದು ಬೇಡ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Health Minister Dinesh Gundu Rao) ಹೇಳಿಕೆ ನೀಡಿದ್ದಾರೆ. ಈ ನಡುವೆ ಆರೋಗ್ಯ ಇಲಾಖೆಯಿಂದ ಝಿಕಾ ವೈರಸ್ ಮಾರ್ಗಸೂಚಿ (Health Department Guidelines) ಬಿಡುಗಡೆಯಾಗಿದೆ. ಈ ನಿಯಮವನ್ನು ರಾಜ್ಯದ ಜನತೆಯು ಅನುಸರಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಝಿಕಾ ಸೋಂಕು ಯಾರೊಬ್ಬರಿಗೂ ಕಾಣಿಸಿಕೊಂಡಿಲ್ಲ ಬದಲಿಗೆ ಸೊಳ್ಳೆಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. 10 ದಿನಗಳ ಹಿಂದಷ್ಟೇ ರಿಪೋರ್ಟ್ ಬಂದಿದೆ. ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿತ್ತು. ಝಿಕಾ ಹಾಗೂ ನಿಫಾ ವೈರಸ್ ಬೇರೆ ಬೇರೆಯಾಗಿವೆ. ನಿಫಾ ಗಂಭೀರ ವೈರಾಣಾಗಿದ್ದರೆ, ಝಿಕಾ ಬಗ್ಗೆ ಭಯ ಬೇಡ. ಆದರೆ, ಬಾಣಂತಿಯರು ಎಚ್ಚರಿಕೆಯಿಂದ ಇರಬೇಕು. ಆಸ್ಪತ್ರೆಯಲ್ಲಿ ಇದ್ದವರಿಗೆ ಪರೀಕ್ಷೆ ಮಾಡಲಾಗಿದೆ. ರೋಗ ಲಕ್ಷಣ ಇದ್ದವರ ಸ್ಯಾಂಪಲ್ ಪಡೆಯಲಾಗಿದೆ. ಇನ್ನೂ 3 ದಿನಗಳಲ್ಲಿ ರಿಪೋರ್ಟ್ ಬರುವ ಸಾಧ್ಯತೆ ಇದೆ. ಇಲಾಖೆಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆಯಿಂದ ಸರ್ವಿಲೆನ್ಸ್ ಮಾಡಿರುವುದಕ್ಕೆ ಈಗ ವೈರಸ್ ಪತ್ತೆಯಾಗಿದೆ ಎಂದು ಹೇಳಿದ್ದರು. ಈಗ ಆರೋಗ್ಯ ಇಲಾಖೆಯಿಂದ ಝಿಕಾ ವೈರಸ್ ಮಾರ್ಗಸೂಚಿ ಬಿಡುಗಡೆಯಾಗಿದೆ.
ಜನರು ಯಾವ ನಿಯಮ ಪಾಲಿಸಬೇಕು?
ರೋಗದ ಲಕ್ಷಣ ಕಂಡು ಬಂದರೆ ಕೂಡಲೇ ಜನರು ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಈ ಮೂಲಕ ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳಬಾರದು ಎಂಬ ಸಲಹೆಯನ್ನು ಆರೋಗ್ಯ ಇಲಾಖೆ ನೀಡಿದೆ.
ರೋಗದ ಲಕ್ಷಣಗಳೇನು?
- ಕಣ್ಣು ಕೆಂಪಾಗುವಿಕೆ
- ತಲೆ ನೋವು
- ಜ್ವರ
- ಕೀಲುಗಳಲ್ಲಿ ನೋವು
- ಗಂಧೆಗಳು
- ಸ್ನಾಯುಗಳಲ್ಲಿ ನೋವು
ಝಿಕಾ ವೈರಸ್ ತಡೆಗಟ್ಟಲು ಜನಸಾಮಾನ್ಯರ ಜವಾಬ್ದಾರಿ ಏನು?
- ನೀರು ಶೇಖರಣಾ ಪರಿಕರಗಳನ್ನು (ಟ್ಯಾಂಕ್, ಟಬ್ ಇತ್ಯಾದಿ) ಮುಚ್ಚಿಡಬೇಕು. ಅಲ್ಲದೆ, ವಾರಕ್ಕೊಮ್ಮೆ ಅವುಗಳನ್ನು ಸ್ವಚ್ಛಗೊಳಿಸಬೇಕು.
- ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಜತೆಗೆ ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು.
- ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ, ಮಕ್ಕಳು, ವಯೋವೃದ್ಧರು ವಿಶ್ರಾಂತಿ ಪಡೆಯುವಾಗ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಬೇಕು.
- ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು.
ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದನ್ನೂ ಓದಿ:Zika Virus : ಯಾರೊಬ್ಬರಿಗೂ ಭಾದಿಸದ ಝಿಕಾ; ಬಾಣಂತಿಯರು ಹುಷಾರ್- ದಿನೇಶ್ ಗುಂಡೂರಾವ್!
ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ/ವೈದ್ಯರನ್ನು ಸಂಪರ್ಕ ಮಾಡಬೇಕು ಎಂದು ಆರೋಗ್ಯ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ.