ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ- ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಶ್ರಮಿಸಬೇಕು. ಬಹುಮುಖ್ಯವಾಗಿ ನಾಲ್ಕು ವರ್ಗಗಳನ್ನು ಗುರಿಯಾಗಿಸಿಕೊಂಡು ನಮ್ಮ ಸಾಧನೆಯನ್ನು ತಲುಪಿಸುವ ಕೆಲಸ ಆಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಸೋಮವಾರ (ಮಾ. 25) ಏರ್ಪಡಿಸಿದ್ದ ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಡಿ. ಬಡವರು, ರೈತರು, ಮಹಿಳೆಯರು, ಯುವಜನತೆ ಎಂಬ 4 ವರ್ಗಗಳ ಜನರನ್ನು ನಾವು ತಲುಪಬೇಕಿದೆ. ಅವರಿಗೆ ಮೋದಿಯವರ ಸಾಧನೆಗಳನ್ನು ತಲುಪಿಸಬೇಕಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯವು ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರುಜುವಾತು ಮಾಡಬೇಕಿದೆ. ಇದಕ್ಕಾಗಿ ನಮ್ಮೆಲ್ಲರ ಶ್ರಮ ಅತ್ಯಗತ್ಯ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.
28 ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಿದೆ
ಮುಂದಿನ ಲೋಕಸಭಾ ಚುನಾವಣೆಯು ಈ ದೇಶದ ಭವಿಷ್ಯವನ್ನು ರೂಪಿಸಲಿದೆ. ಬಿಜೆಪಿ- ಜೆಡಿಎಸ್ ಎರಡೂ ಪಕ್ಷಗಳು ಒಗ್ಗಟ್ಟಾಗಿ ಶ್ರಮ ಹಾಕಿ ರಾಜ್ಯದ 28ಕ್ಕೆ 28 ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಿದೆ. ಈ ಮೂಲಕ ನರೇಂದ್ರ ಮೋದಿಯವರ ಕೈಗಳನ್ನು ಬಲಪಡಿಸುವ ಚುನಾವಣೆ ಇದು ಎಂದು ವಿಶ್ಲೇಷಿಸಿದರು.
ದೇಶದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಈ ದೇಶದ ವಿರೋಧ ಪಕ್ಷಗಳು ಈಗಾಗಲೇ ತೀರ್ಮಾನ ಮಾಡಿವೆ. ಆದರೂ, ನಾವು ಚುನಾವಣೆಯನ್ನು ಸವಾಲಾಗಿ, ಗಂಭೀರವಾಗಿ ಸ್ವೀಕರಿಸಬೇಕು ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.
58 ಸಾವಿರ ಬೂತ್‍ಗಳನ್ನು ನೇರವಾಗಿ ತಲುಪಿ
ಎಲ್ಲ 58 ಸಾವಿರ ಬೂತ್‍ಗಳನ್ನು ನೇರವಾಗಿ ತಲುಪಬೇಕಿದೆ. ನರೇಂದ್ರ ಮೋದಿಯವರ ಜನಪ್ರಿಯತೆ, ಜನಪರ ಯೋಜನೆಗಳನ್ನು ಮತವಾಗಿ ಪರಿವರ್ತಿಸುವ ಸವಾಲನ್ನು ಸ್ವೀಕರಿಸಿ ಕೆಲಸ ಮಾಡಿ ಎಂದು ಸೂಚಿಸಿದ ವಿಜಯೇಂದ್ರ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅಧಿಕಾರವನ್ನು ಪಡೆದುಕೊಂಡಿದೆ. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಗ್ಗೆ ತಪ್ಪು ನರೇಟಿವ್ ಅನ್ನು ಕಾಂಗ್ರೆಸ್ ಪಕ್ಷ ಮುಂದಿಟ್ಟಿತ್ತು ಎಂದು ವಿಶ್ಲೇಷಿಸಿದರು.
ಇದನ್ನೂ ಓದಿ: Lok Sabha Election 2024: ಮೋದಿ ಮೋದಿ ಎಂದವರ ಕಪಾಳಕ್ಕೆ ಹೊಡೆಯಿರಿ ಎಂದ ಸಿದ್ದರಾಮಯ್ಯ ಸಂಪುಟ ಸಚಿವ!
ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆಯ ಸವಾಲನ್ನು ನಾವು ಸ್ವೀಕರಿಸಿ ಯಶಸ್ವಿಯಾಗಬೇಕು ಎಂದು ಬಿ.ವೈ. ವಿಜಯೇಂದ್ರ ಸಲಹೆ ನೀಡಿದರು.
ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಪ್ರೀತಮ್ ಗೌಡ, ರಾಜ್ಯ ಉಪಾಧ್ಯಕ್ಷೆ ಮತ್ತು ಮಾಜಿ ಶಾಸಕಿ ರೂಪಾಲಿ ನಾಯಕ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ಪ್ರಕೋಷ್ಠಗಳ ರಾಜ್ಯ ಸಂಚಾಲಕ ಎಸ್. ದತ್ತಾತ್ರಿ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಮತ್ತು ಅಪೇಕ್ಷಿತರು ಉಪಸ್ಥಿತರಿದ್ದರು.