Site icon Vistara News

Lok Sabha Election 2024: ಕಷ್ಟಕ್ಕೆ ಸ್ಪಂದಿಸುವ ಡಿಕೆಸು ಬೇಕೋ? ವೈಟ್‌ ಕಾಲರ್‌ ಡಾ. ಮಂಜುನಾಥ್‌ ಬೇಕೋ? ಸಿಎಂ ಪ್ರಶ್ನೆ

CM Siddaramaiah hugs DK Suresh in Bangalore Rural Lok Sabha constituency election campaign

ರಾಮನಗರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ (DK Suresh) ಅವರು ನೂರಕ್ಕೆ ನೂರು ಗೆಲ್ಲುತ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಃಸಿದ್ಧ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ನಿಮಗೆ ಕಷ್ಟಕ್ಕೆ ಸ್ಪಂದಿಸುವ ಸುರೇಶ್‌ ಬೇಕೋ? ಬಿಜೆಪಿಯ ವೈಟ್‌ ಕಾಲರ್‌ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್‌ (Dr CN Manjunath) ಬೇಕೋ ಎಂದು ಪ್ರಶ್ನೆ ಮಾಡಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯಲ್ಲಿ ಮಾತನಾಡಿ, ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ ಎಂದರು.

CM Siddaramaiah in Bangalore Rural Lok Sabha constituency election campaign

ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ?

ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ ಎಂದರು.

ನಾವು ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಕನ್ನಡ ನಾಡಿನ‌ ಜನತೆಯ ಖಾತೆಗೆ ಹಣ ಜಮೆ ಮಾಡುತ್ತಿದ್ದೇವೆ. ಶೂದ್ರರು, ದಲಿತರು, ಮಹಿಳೆಯರು, ಶ್ರಮಿಕರು, ದುಡಿಯುವ ವರ್ಗಗಳ ಎಲ್ಲರ ಮನೆ ಮನೆಯನ್ನೂ ನಮ್ಮ ಗ್ಯಾರಂಟಿಗಳು ತಲುಪಿವೆ. ಇದು ನಮ್ಮ ಬದ್ಧತೆ. ನೀವು ಕೊಟ್ಟ ಒಂದೊಂದು ವೋಟಿಗೂ ಘನತೆ ತಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು, ಕುಟುಂಬಗಳಿಗೂ ನಮ್ಮ ಸರ್ಕಾರ ಹಣ ಜಮೆ ಮಾಡುತ್ತಿದೆ. ಪಕ್ಷ, ಜಾತಿ, ಧರ್ಮ ಯಾವುದನ್ನೂ ನೋಡದೆ ಇಡೀ ನಾಡಿನ ಜನತೆಗೆ ಅವರ ಕುಟುಂಬಗಳಿಗೆ ಉಚಿತ ಅಕ್ಕಿ, ಉಚಿತ ವಿದ್ಯುತ್ ಜತೆಗೆ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ, ನಿರುದ್ಯೋಗಿಗಳ ಖಾತೆಗೆ ಭತ್ಯೆಯನ್ನು ಜಮೆ ಮಾಡುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ಪ್ರತಿಯೊಬ್ಬ ಮತದಾರರ ನಂಬಿಕೆ ಉಳಿಸಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

CM Siddaramaiah in Bangalore Rural Lok Sabha constituency election campaign

ಬಿಜೆಪಿ ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ ಬಿಜೆಪಿ ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ವಿಪರೀತ ಹೆಚ್ಚಿಸಿ ನಿಮ್ಮ ತೆರಿಗೆ ಹಣವನ್ನೂ ನಿಮಗಾಗಿ ಖರ್ಚು ಮಾಡಲಿಲ್ಲ. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಕಾಂಗ್ರೆಸ್ ಅಂದರೆ ಬಡವರ, ಮಧ್ಯಮ ವರ್ಗದವರ ಪರವಾಗಿ ಕೆಲಸ ಮಾಡುವ ಪಕ್ಷ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

ಯಾರು ಬೇಕು ನಿಮಗೆ?

ಹೀಗಾಗಿ ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಎಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದಾಗ, ಮುಖ್ಯಮಂತ್ರಿ ಆಗಿದ್ದಾಗ ರಾಮನಗರ ಜಿಲ್ಲೆಯನ್ನು ಏಕೆ ಕಡೆಗಣಿಸಿದ್ದರು ಎನ್ನುವುದಕ್ಕೆ ಜನರಿಗೆ ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಮಂಕಾಳ ವೈದ್ಯ , ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ. ಶ್ರೀನಿವಾಸ್, ವಿಧಾನ‌ ಪರಿಷತ್ ಸದಸ್ಯ ಸುದಾಮ ದಾಸ್ ಸೇರಿ ರಾಮನಗರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Exit mobile version