ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲಿ ರಾಜ್ಯದಲ್ಲಿ ಬರ (Karnataka Drought) ಪರಿಹಾರ ಪಾಲಿಟಿಕ್ಸ್ ಜೋರಾಗಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ನಡುವೆ ತಿಕ್ಕಾಟಗಳು ಜೋರಾಗಿಯೇ ನಡೆದಿವೆ. ಈಗ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ (Congress Karnataka) ಮನವಿ ಮಾಡಿದೆ. ಕಾರಣ, ಈಗ ನೀತಿ ಸಂಹಿತೆ (Model Code of Conduct) ಜಾರಿಯಲ್ಲಿರುವುದರಿಂದ ಕೇಂದ್ರ ಸರ್ಕಾರವು ಚುನಾವಣಾ ಆಯೋಗದ (Election Commission) ಅನುಮತಿ ಸಿಕ್ಕಿಲ್ಲ ಎಂದು ಬೊಟ್ಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ದೂರಿದೆ.
ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ನೀಡಬೇಕು ಎಂದು ದೂರಿನಲ್ಲಿ ಕಾಂಗ್ರೆಸ್ ಆಗ್ರಹಿಸಿದೆ. 4663 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆಗೆ ನಿರ್ದೇಶಿಸಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬರ ಪರಿಹಾರ ಕೊಡುವ ವಿಚಾರದಲ್ಲಿ ಎಲೆಕ್ಷನ್ ಕಮಿಷನ್ನ ನೀತಿ ಸಂಹಿತೆ ಅಡ್ಡಿಯಾಗಿದೆ. ಬರ ಪರಿಹಾರ ನೀಡಲು ಹೈಪವರ್ ಕಮಿಟಿ ಸಭೆ ನಡೆಯಬೇಕು. ಸಭೆ ನಡೆಸಲು ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ನಾವು ಪತ್ರ ಬರೆದಿದ್ದೇವೆ. ಆದರೆ, ಚುನಾವಣಾ ಆಯೋಗ ಅನುಮತಿ ನೀಡಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ. ಹೀಗಾಗಿ ಅನುಮತಿ ನೀಡಬೇಕು ಎಂದು ಕಾಂಗ್ರೆಸ್ ದೂರಿನಲ್ಲಿ ಹೇಳಿದೆ.
ಮೀಟಿಂಗ್ ಮಾಡಲು ಚುನಾವಣಾ ಆಯೋಗ ನಿರ್ದೇಶನ ನೀಡಬೇಕು
ಈಗ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಮೇವಿನ ಸಮಸ್ಯೆ ಇದೆ. ಕಾನೂನಿನಲ್ಲಿ ಬರ ಪರಿಹಾರ ಕೊಡುವ ಅವಕಾಶ ಇದ್ದರೂ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಬೊಟ್ಟು ಮಾಡುತ್ತಿದೆ. ಹೀಗಾಗಿ ಹೈಪವರ್ ಕಮಿಟಿ ಮೀಟಿಂಗ್ ಮಾಡಲು ಚುನಾವಣಾ ಆಯೋಗ ನಿರ್ದೇಶನ ನೀಡಬೇಕು. ತಕ್ಷಣವೇ ಬರ ಪರಿಹಾರ ನೀಡುವಂತೆ ನಿರ್ದೇಶನ ನೀಡಬೇಕು ಎಂದು ಕಾಂಗ್ರೆಸ್ ಮನವಿ ಮಾಡಿದೆ.
ಬೀದಿಗಳಲ್ಲಿ ಮಾತ್ರವಲ್ಲ ಕೋರ್ಟಲ್ಲೂ ʼಬರ ಪರಿಹಾರʼ ಹೋರಾಟ ಜೋರು: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮಾಧ್ಯಮ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಈಗ ಉತ್ತರ ನೀಡಬೇಕು ಎಂದು ಹೇಳಿದ್ದಾರೆ. ಅಲ್ಲದೆ, ಕೇಂದ್ರದಿಂದ ಕೋರ್ಟ್ನ ದಾರಿ ತಪ್ಪಿಸುವ ಪ್ರಯತ್ನ ಸಹ ಆಗುತ್ತಿದೆ ಎಂದು ಆರೋಪ ಮಾಡಿದ್ದಾರೆ. ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸದ್ಯಕ್ಕೆ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ. ಮುಂದಿನ ವಿಚಾರಣೆಯೊಳಗೆ ಕೇಂದ್ರ ಸರ್ಕಾರ ತನ್ನ ಉತ್ತರವನ್ನು ಸಿದ್ಧಗೊಳಿಸಬೇಕಾಗಿದೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ.
ನ್ಯಾಯಬದ್ಧವಾಗಿ ಕರ್ನಾಟಕಕ್ಕೆ ನೀಡಬೇಕಾಗಿರುವ ಬರ ಪರಿಹಾರವನ್ನು ನೀಡದೆ ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಸತಾಯಿಸುತ್ತಿರುವುದನ್ನು ಕಂಡು ಬೇರೆ ದಾರಿ ಕಾಣದೆ ನ್ಯಾಯ ಕೋರಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿತ್ತು. ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ತುಷಾರ್ ಮೆಹ್ತಾ ಅವರು ಬರಪರಿಹಾರ ವಿಳಂಬಕ್ಕೆ ಕರ್ನಾಟಕ ಸರ್ಕಾರವೇ ಕಾರಣ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂಬ ಅಭಿಪ್ರಾಯ ಮೂಡುವಂತೆ ವಾದ ಮಾಡಿದ್ದಾರೆ. ಇದು ಖಂಡನೀಯ.
‘’ಬರ ಪರಿಹಾರಕ್ಕಾಗಿ ಅವರು (ಕರ್ನಾಟಕ) ನಮ್ಮನ್ನು (ಕೇಂದ್ರ ಸರ್ಕಾರ)ವನ್ನು ಸಂಪರ್ಕಿಸಬಹುದಿತ್ತು. ಈ ಅರ್ಜಿ ಸಲ್ಲಿಸಿರುವ ಸಮಯದ ಮಹತ್ವ ನಮಗೆ ಅರ್ಥವಾಗುತ್ತದೆ. ಈ ಅರ್ಜಿಗೆ ಪ್ರತಿಕ್ರಿಯೆ ಕೋರಿ ನಮಗೆ ನೋಟಿಸ್ ನೀಡಬಾರದು. ಹಾಗೆ ಮಾಡಿದರೆ ಅದು ಸುದ್ದಿಯಾಗುತ್ತದೆ’’ ಎಂದು ಅಡ್ವೋಕೇಟ್ ಜನರಲ್ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ.
ಸುಪ್ರೀಂ ಕೋರ್ಟ್ ಮುಂದೆಯೂ ಸುಳ್ಳು ಹೇಳಿಕೆ
ಕಳೆದ ಎರಡು ಮೂರು ತಿಂಗಳ ಅವಧಿಯಲ್ಲಿ ನಾನು ಮತ್ತೆ ಮತ್ತೆ ಹೇಳಿರುವಂತೆ ‘ಬರಗಾಲಕ್ಕೆ ಪರಿಹಾರ ಕೋರಿ ನಮ್ಮ ಸರ್ಕಾರ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಷ್ಟದ ವಿವರ ಮತ್ತು ನಿರೀಕ್ಷಿತ ಪರಿಹಾರದ ಮೊತ್ತವನ್ನು ಒಳಗೊಂಡ ಮನವಿ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೆವು. ಅದರ ನಂತರ ನಾನು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದೆವು. ನಮ್ಮ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತ್ಯೇಕವಾಗಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ್ದರು. ಹೀಗಿದ್ದರೂ ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಕೇಂದ್ರ ಹಣಕಾಸು ಸಚಿವರು ಮತ್ತು ಗೃಹಸಚಿವರು ಯಾವ ಮುಜುಗರ ಇಲ್ಲದೆ ಸುಳ್ಳು ಹೇಳುತ್ತಾ ಬಂದಿದ್ದಾರೆ. ಇಂದು ಇದೇ ಸುಳ್ಳನ್ನು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಹೇಳಿದೆ.
ಇದನ್ನೂ ಓದಿ: Lok Sabha Election 2024: ಏಪ್ರಿಲ್ 14ರಂದು ಮಂಗಳೂರಿಗೆ ಮೋದಿ; ದಾಖಲೆ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿ!
ಮುಂದಿನ ವಿಚಾರಣೆ ವೇಳೆ ಉತ್ತರ ನೀಡಬೇಕಿದೆ
ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸದ್ಯಕ್ಕೆ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ. ಮುಂದಿನ ವಿಚಾರಣೆಯೊಳಗೆ ಕೇಂದ್ರ ಸರ್ಕಾರ ತನ್ನ ಉತ್ತರವನ್ನು ಸಿದ್ಧಗೊಳಿಸಬೇಕಾಗಿದೆ.
ಬರಪರಿಹಾರ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧದ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲಿಯೂ ಮುಂದುವರಿಯಲಿದೆ. ಕೇಂದ್ರ ಸರ್ಕಾರದ ಸುಳ್ಳುಗಳನ್ನು ಒಂದೊಂದಾಗಿ ಬಯಲುಗೊಳಿಸುತ್ತಾ ಅದರ ನಿಜಸ್ವರೂಪವನ್ನು ರಾಜ್ಯದ ಜನತೆಯ ಮುಂದಿಡುವ ಪ್ರಯತ್ನವನ್ನು ಮಾಡಲಿದ್ದೇವೆ” ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.