Site icon Vistara News

Lok Sabha Election 2024: ಬಿಜೆಪಿಗೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ, ಘನತೆ ಬರುತ್ತಾ? ಸಿಎಂ ಪ್ರಶ್ನೆ

Lok Sabha Election 2024 Will your vote get respect and dignity if you vote for BJP CM Siddaramaiah question

ಚಾಮರಾಜನಗರ (ಎಚ್.ಡಿ.ಕೋಟೆ): ಗೇಯೋ ಎತ್ತಿಗೆ ಹುಲ್ಲು ಹಾಕುತ್ತೀರೋ… ಕಳ್ಳ ಎತ್ತಿಗೆ ಹುಲ್ಲು ಹಾಕುತ್ತೀರೋ ಯೋಚಿಸಿ. ಇಂಥ ಬಿಜೆಪಿಗೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ, ಘನತೆ ಬರುತ್ತಾ ಎಂದು ಎಚ್‌.ಡಿ. ಕೋಟೆಯಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ಪ್ರಚಾರದ ವೇಳೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮತದಾರರಿಗೆ ಪ್ರಶ್ನೆ ಮಾಡಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಎಚ್.ಡಿ. ಕೋಟೆಯಲ್ಲಿ ನಡೆದ ಬೃಹತ್ ಜನಧ್ವನಿ-2 ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನತೆ ಬರಗಾಲಕ್ಕೆ ತುತ್ತಾಗಿದ್ದಾರೆ. ನಮ್ಮ ಜನ ಕಟ್ಟಿದ ತೆರಿಗೆಯಲ್ಲಿನ ಪಾಲು ನಮಗೆ ವಾಪಸ್ ಕೊಡಿ, ಬರಗಾಲಕ್ಕೆ ನಮ್ಮ ಪಾಲಿನ ಅನುದಾನ ಕೊಡಿ ಅಂತ ನಾವು ಪತ್ರ ಬರೆದು ಹೋರಾಟ ಮಾಡಿದರೂ ಮೋದಿ ಸರ್ಕಾರ ನಮ್ಮ ಪಾಲಿನ ನಯಾಪೈಸೆ ಕೊಡಲಿಲ್ಲ. ಇಂಥವರಿಗೆ ಮತ ಹಾಕಿದರೆ, ಆ ಮತಕ್ಕೆ ಗೌರವ ಬರುತ್ತಾ ಎಂದು ಪ್ರಶ್ನಿಸಿದರು.‌

ರಾಜ್ಯದ ಬಿಜೆಪಿ ನಾಯಕರು ಕೋಲೆ ಬಸವನಂತೆ ತಲೆ ಆಡಿಸ್ತಾರೆ‌. ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಜ್ಯಕ್ಕೆ ಮಾಡಿದ ಅನ್ಯಾಯ ಸರಿ, ಬರಗಾಲ ಬಂದರೂ ಮೋದಿ ಅನುದಾನ ಕೊಡದೇ ಇದ್ದದ್ದೇ ಸರಿ, ಮೋದಿಯವರು ಪೆಟ್ರೋಲ್-ಡೀಸೆಲ್-ಗ್ಯಾಸ್-ರಸಗೊಬ್ಬರ ಬೆಲೆಯನ್ನು ಹೆಚ್ಚಿಸಿದ್ದೇ ಸರಿ… ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇಂಥವರಿಗೆ ನಿಮ್ಮ ಮತ ಹೋಗಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ನರೇಂದ್ರ ಮೋದಿಯವರು ಹೇಳಿದ್ದರಲ್ಲಿ ಒಂದೇ ಒಂದನ್ನೂ ಜಾರಿ ಮಾಡಿಲ್ಲ. ಬದಲಿಗೆ ಜನರ ಮುಂದೆ ಆಶ್ವಾಸನೆ ಕೊಟ್ಟು ಅದಕ್ಕೆ ಉಲ್ಟಾ ನಡೆದುಕೊಂಡಿದ್ದಾರೆ. ವಿದೇಶದಿಂದ ಕಪ್ಪು ಹಣ ತರಲಿಲ್ಲ, ಭಾರತೀಯರ ಖಾತೆಗೆ 15 ಲಕ್ಷ ರೂಪಾಯಿ ಹಾಕಲಿಲ್ಲ, ರೈತರ ಆದಾಯ ದುಪ್ಪಟ್ಟು ಮಾಡಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದರು. ಆದರೆ, ಹೊಸ ಉದ್ಯೋಗ ಸೃಷ್ಟಿ ಮಾಡೋದಿರಲಿ, ಇರೋ ಕೆಲಸಗಳೂ ಬಂದ್ ಆದ್ವು. ಇಂಥವರಿಗೆ ನಿಮ್ಮ ಕೇಳುವ ಮುಖ ಇದೆಯಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಕೊಟ್ಟ ಮಾತು ಈಡೇರಿಸಿದ್ದೇವೆ, ಮುಂದೆಯೂ ಈಡೇರಿಸುತ್ತೇವೆ

ನಮ್ಮ ಕಾಂಗ್ರೆಸ್ ಸರ್ಕಾರ ನಿಮಗೆ ಕೊಟ್ಟ ಮಾತು ಈಡೇರಿಸಿ ನಿಮ್ಮ ಮತಕ್ಕೆ ಗೌರವ ತಂದಿದೆ. ನಿಮ್ಮ ಮತಗಳ ತೂಕ ಹೆಚ್ಚಿಸಿದ್ದೇವೆ. ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನರ ಬದುಕಿನ ಸಂಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ಬೇಗ ಬೇಗ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆವು. ಇದರಿಂದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಸ್ವಪಕ್ಷೀಯರ ವಿರುದ್ಧ ಮತ್ತೆ ಗುಡುಗಿದ ಹರಿಪ್ರಸಾದ್; ಚುನಾವಣೆ ಬಳಿಕ ಪೆನ್‌ಡ್ರೈವ್‌ ರಿಲೀಸ್‌!

ಅನಿಲ್ ಚಿಕ್ಕಮಾದು ಕೇಳಿದ್ದೆಲ್ಲ ಕ್ಷೇತ್ರಕ್ಕೆ ಕೊಡುತ್ತೇನೆ

ನೀವು ಅನಿಲ್ ಚಿಕ್ಕಮಾದು ಅವರಿಗೆ ಶಕ್ತಿ ತುಂಬಿ. ನಮ್ಮ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಅನಿಲ್ ಅವರು ಕೇಳಿದ್ದನ್ನೆಲ್ಲ ಕೊಡಲು ಬದ್ಧವಾಗಿದೆ ಎಂದರು.

ಸಚಿವರಾದ ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೆ. ವೆಂಕಟೇಶ್, ಎಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಜಿಲ್ಲೆಯ ಶಾಸಕರಾದ ದರ್ಶನ್ ದ್ರುವನಾರಾಯಣ್, ಗಣೇಶ್ ಮಹದೇವ್ ಪ್ರಸಾದ್, ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ಮಾಜಿ ಶಾಸಕರಾದ ಕೇಶವಮೂರ್ತಿ, ಡಿಸಿಸಿ ಅಧ್ಯಕ್ಷ ವಿಜಯ್ ಕುಮಾರ್ ಸೇರಿ ಹಲವು ಮಂದಿ ಜಿಲ್ಲಾ, ತಾಲೂಕು, ಬ್ಲಾಕ್ ಮುಖಂಡರು ಉಪಸ್ಥಿತರಿದ್ದರು.

Exit mobile version