Site icon Vistara News

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನಿಗಳಾದ ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

Narenda Modi

Narenda Modi

ನವದೆಹಲಿ: ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಕೂಡಲೇ ಅವರು ಸೋಮವಾರ (ಜೂನ್‌ 10) ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ (Pratibha Patil) ಮತ್ತು ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್‌ ಸಿಂಗ್‌ (Manmohan Singh) ಮತ್ತು ಎಚ್‌.ಡಿ.ದೇವೇಗೌಡ (HD Devegowda) ಅವರಿಗೆ ಕರೆ ಮಾಡಿ ಆಶೀರ್ವಾದ ಪಡೆದುಕೊಂಡರು.

ಜೂನ್‌ 9ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು 30 ಕ್ಯಾಬಿನೆಟ್ ದರ್ಜೆಯ ಸಚಿವರು ಸೇರಿದಂತೆ ಇತರ 71 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರತಿಭಾ ಪಾಟೀಲ್‌ ಮತ್ತು ಮನಮೋಹನ್‌ ಸಿಂಗ್ ಇಬ್ಬರೂ ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಿಯಾಗಿದ್ದರು. ಕಾಂಗ್ರೆಸ್ ಬೆಂಬಲಿತ ಯುನೈಟೆಡ್ ಫ್ರಂಟ್ ಸರ್ಕಾರದ ಅವಧಿಯಲ್ಲಿ ದೇವೇಗೌಡ ಅವರು ಪ್ರಧಾನಿಯಾಗಿದ್ದರು.

ಸದ್ಯ ಬಿಜೆಪಿ ನೇತೃತ್ವದ ಎನ್‌ಡಿಎಗೆ ದೇವೇಗೌಡ ಅವರ ಜೆಡಿಎಸ್‌ ಬೆಂಬಲ ನೀಡಿದೆ. ಕರ್ನಾಟಕದಲ್ಲಿ ಮೂರು ಕಡೆ ಸ್ಪರ್ಧಿಸಿದ್ದ ಜೆಡಿಎಸ್‌ ಅಭ್ಯರ್ಥಿಗಳ ಪೈಕಿ ಇಬ್ಬರು ಜಯ ಗಳಿಸಿದ್ದಾರೆ. ಈ ಪೈಕಿ ದೇವೇಗೌಡ ಅವರ ಪುತ್ರ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮೋದಿ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ (ಸಂಪುಟ ದರ್ಜೆ)ಯ ಸಚಿವರಾಗಿ ಅವರು ನಿಯುಕ್ತಿಗೊಂಡಿದ್ದಾರೆ.

ರಾಜ್ಯಕ್ಕೆ 5 ಸಚಿವ ಸ್ಥಾನ

ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ (Modi 3.0 Cabinet) ರಾಜ್ಯದ ಐವರಿಗೆ ಸಚಿವ ಸ್ಥಾನ ಸಿಕ್ಕಿದೆ. ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದರೆ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಖಾತೆ ನೀಡಲಾಗಿದೆ. ಕರ್ನಾಟಕದ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮತ್ತೆ ಹಣಕಾಸು ಖಾತೆ ನೀಡಲಾಗಿದ್ದು, ಕಳೆದ ಬಾರಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಪ್ರಲ್ಹಾದ್‌ ಜೋಶಿ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ರಕ್ಷಣೆ, ಮರು ಬಳಕೆ ಇಂಧನ ಖಾತೆ ನೀಡಲಾಗಿದೆ. ಇನ್ನು ಮಂಡ್ಯ ಸಂಸದ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಿಕ್ಕಿದೆ. ಕಳೆದ ಬಾರಿ ಕೃಷಿ ಖಾತೆ ರಾಜ್ಯ ಸಚಿವರಾಗಿದ್ದ ಬೆಂ.ಉತ್ತರ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ, ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ: Tshering Tobgay: ಮೋದಿ ನನ್ನ ಗುರು, ದೊಡ್ಡಣ್ಣ;‌ ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ ಬಹುಪರಾಕ್!

ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಸೋಮವಾರ (ಜೂನ್‌ 10) ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಮೊದಲ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.

Exit mobile version