ಕೊಲಂಬೊ: ಶ್ರೀಲಂಕಾದಲ್ಲಿ ಎದುರಾಗಿರೋ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಜನಸಾಮಾನ್ಯರು ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ರೀಲಂಕಾ ಸರ್ಕಾರದ ವಿರುದ್ಧ ಜನರ ಆಕ್ರೋಶ ಸ್ಫೋಟಗೊಂಡಿದೆ. ಶ್ರೀಲಂಕಾ ಅಧ್ಯಕ್ಷ ಗೊಟಬಯಾ ರಾಜಪಕ್ಸ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದೆ.
ಆರ್ಥಿಕ ಬಿಕ್ಕಟ್ಟು ಹಾಗೂ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶಗೊಂಡಿರುವ ಪ್ರತಿಭಟನಾಕಾರರು ಶುಕ್ರವಾರ ಶ್ರೀಲಂಕಾ ಅಧ್ಯಕ್ಷ ಗೊಟಬಯಾ ರಾಜಪಕ್ಸ ಮನೆಯ ಎದುರು ಭಾರಿ ಪ್ರತಿಭಟನೆ ನಡೆಸಿದರು. ʻಗೋ ಹೋಂ, ಗೊಟ ಗೋ ಹೋಂ (ಗೊಟಬಯಾ ಮನೆಗೆ ಹೋಗು)ʼ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಶ್ರೀಲಂಕಾ ಅಧ್ಯಕ್ಷ ನಿವಾಸದ ಬಳಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ಶ್ರೀಲಂಕಾ ಸೈನಿಕರ ಮೇಲೆ ಕಲ್ಲುತೂರಾಟ ನಡೆಸಿದ ಪ್ರತಿಭಟನಾಕಾರರು ಸೇನೆಯ ಎರಡು ಬಸ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಶ್ರೀಲಂಕಾ ಸೇನೆ ಹಾಗೂ ಪೊಲೀಸರು ಜಲಫಿರಂಗಿ ಹಾಗೂ ಅಶ್ರುವಾಯು ಪ್ರಯೋಗ ನಡೆಸಿದರು.
ರಾಜಪಕ್ಸ ನಿವಾಸದ ಬಳಿ ನಡೆದ ಹಿಂಸಾಚಾರದಲ್ಲಿ ಐವರು ಪೋಲಿಸ್ ಸಿಬ್ಬಂದಿ ಹಾಗೂ ಓರ್ವ ಪ್ರತಿಭಟನಾಕಾರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ಘರ್ಷಣೆಯಲ್ಲಿ ಭಾಗಿಯಾಗಿದ್ದ 54 ಪ್ರತಿಭಟನಾಕಾರರನ್ನು ಪೋಲಿಸರು ಬಂಧಿಸಿದ್ದಾರೆ.
ಶ್ರೀಲಂಕಾಗೆ ಭಾರತದ ಆರ್ಥಿಕ ನೆರವು
ಶ್ರೀಲಂಕಾದಲ್ಲಿ ಸಂಕಷ್ಟದಲ್ಲಿರುವ ತಮಿಳರಿಗೆ ಮಾನವೀಯ ನೆರವು ನೀಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
ಶ್ರೀಲಂಕಾದಲ್ಲಿ ಪ್ರತಿದಿನ 13 ಗಂಟೆಗಳ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದ್ದು, ಅಲ್ಲಿನ ಜನ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ತೀವ್ರ ಆರ್ಥಿಕ ಮುಗಟ್ಟು ಎದುರಿಸುತ್ತಿರುವ ಶ್ರೀಲಂಕಾಗೆ ಭಾರತ ಸರ್ಕಾರ ಈಗಾಗಲೇ 2.4 ಶತಕೋಟಿ ಡಾಲರ್ ಆರ್ಥಿಕ ನೆರವು ನೀಡಿದೆ.
ಅಲ್ಲದೆ, ಭಾರತ ಸರ್ಕಾರವು ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನಿಂದ ಹೊರ ಬರಲು ಸೂಕ್ತ ಸಲಹೆ ನೀಡಿ ಸಹಾಯ ಮಾಡುವಂತೆ ತಜ್ಞರನ್ನು ಕೂಡ ನೇಮಕ ಮಾಡಲು ಚಿಂತನೆ ನಡೆಸಿದೆ.