ಮುಂಬೈ: ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿರುವ ಕೈಗವಸು (Hand Glove) ತಯಾರಿಸುವ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ (Fire Accident) ಸಂಭವಿಸಿದ್ದು, ಆರು ಕಾರ್ಮಿಕರು ಮೃತಪಟ್ಟಿದ್ದಾರೆ. ಭಾನುವಾರ (ಡಿಸೆಂಬರ್ 31) ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅಗ್ನಿ ದುರಂತ ಸಂಭವಿಸಿದ್ದು, ಕಾರ್ಖಾನೆಯ ಒಳಗಿದ್ದ ಆರು ಜನ ಸಜೀವವಾಗಿ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.
“ಸಂಭಾಜಿ ನಗರದ ವಾಲುಜ್ ಎಂಐಡಿಸಿ ಪ್ರದೇಶದಲ್ಲಿರುವ ಹ್ಯಾಂಡ್ ಗ್ಲೋವ್ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ ಎಂದು ಬೆಳಗಿನ ಜಾವ ಕರೆ ಬಂತು. ಕೂಡಲೇ ಸ್ಥಳಕ್ಕೆ ಧಾವಿಸಿ, ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಸಲಾಯಿತು. ಆದರೆ, ಅಗ್ನಿಯ ಕೆನ್ನಾಲಗೆಯು ಇಡೀ ಕಾರ್ಖಾನೆಗೆ ವ್ಯಾಪಿಸಿದ ಕಾರಣ ಬೆಂಕಿ ನಂದಿಸುವಷ್ಟರಲ್ಲಿಯೇ ಆರು ಕಾರ್ಮಿಕರು ಮೃತಪಟ್ಟಿದ್ದರು. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಂಪೂರ್ಣವಾಗಿ ಅಗ್ನಿ ನಂದಿಸಿದ ಬಳಿಕವೇ ಎಷ್ಟು ಜನ ಮೃತಪಟ್ಟಿದ್ದಾರೆ ಎಂಬುದು ಗೊತ್ತಾಗಲಿದೆ” ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
Fire breaks out at glove factory in Maharashtra, five trapped inside
— ANI Digital (@ani_digital) December 30, 2023
Read @ANI Story | https://t.co/cTlMtoQa9r#Fire #Maharashtra #GloveFactory pic.twitter.com/PH7gTKZ8bZ
ಏಕಾಏಕಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಇದುವರೆಗೆ ತಿಳಿದುಬಂದಿದೆ. ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿಯ ತೀವ್ರತೆಗೆ ಇಡೀ ಕಾರ್ಖಾನೆ ಸುಟ್ಟುಹೋಗಿದೆ ಎಂದು ತಿಳಿದುಬಂದಿದೆ. ಕಾರ್ಖಾನೆಯಲ್ಲಿ ಸುಮಾರು 10-15 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಂಕಿ ಹೊತ್ತಿಕೊಳ್ಳುತ್ತಲೇ ಒಂದಷ್ಟು ಕಾರ್ಮಿಕರು ಹೊರಗೆ ಓಡಿದರು. ಆದರೆ, ಆರು ಕಾರ್ಮಿಕರು ಮಾತ್ರ ಅಗ್ನಿಯ ಕೆನ್ನಾಲಗೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Car Fire : ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಕಾರು; ಚಾಲಕ ಸಜೀವ ದಹನ
ಕರ್ನಾಟಕದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ಕೆಲ ತಿಂಗಳ ಹಿಂದೆ ನಡೆದ ಅಗ್ನಿ ದುರಂತದಲ್ಲಿ 13 ಮಂದಿ ಮೃತಪಟ್ಟಿದ್ದರು. ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ 6 ಮಂದಿ ಗಂಭೀರವಾಗಿ ಗಾಯಗೊಂಡು, ಹಲವರು ನಾಪತ್ತೆಯಾಗಿದ್ದರು. ಆದರೆ, ನಾಪತ್ತೆಯಾಗಿದ್ದ 13 ಕಾರ್ಮಿಕರು ಸಜೀವ ದಹನವಾಗಿದ್ದು, ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ದೀಪಾವಳಿ ಹಬ್ಬಕ್ಕಾಗಿ ಮಳಿಗೆಯಲ್ಲಿ ಹೆಚ್ಚು ಪಟಾಕಿಗಳನ್ನು ಶೇಖರಣೆ ಮಾಡಲಾಗಿತ್ತು. ಆದರೆ, ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ದುರಂತ ಸಂಭವಿಸಿತ್ತು. ಮಳಿಗೆಯಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ