ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದ ಎಂಟು ಜನರ ಸಜೀವ ದಹನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಆರ್.ಭಾರದ್ವಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಏಪ್ರಿಲ್ 7ರೊಳಗೆ ಪ್ರಕರಣದ ತನಿಖೆಯ ಪ್ರಗತಿ ಬಗ್ಗೆ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ.
ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸದಂತೆ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಮಾಡಿದ್ದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯದ ದೃಷ್ಠಿಕೋನದಲ್ಲಿ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಎಂದು ಹೈಕೋರ್ಟ್ ತಿಳಿಸಿದೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಬಂಧಿತರನ್ನು ಸಿಬಿಐ ವಶಕ್ಕೆ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರ ರಚಿಸಿರುವ ಎಸ್‌ಐಟಿಗೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.
ಟಿಎಂಸಿಯ ಗ್ರಾಮ ಪಂಚಾಯತ್ ಸದಸ್ಯನ ಹತ್ಯೆಯ ನಂತರ ಬೊಗ್ಟುಯಿ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಕೃತ್ಯದಲ್ಲಿ ಇಬ್ಬರು ಮಕ್ಕಳು, ಐವರು ಮಹಿಳೆಯರು ಸೇರಿ ಎಂಟು ಜನರನ್ನು ಸಜೀವವಾಗಿ ಸುಡಲಾಗಿತ್ತು. ಸಂತ್ರಸ್ತರನ್ನು ಸಜೀವವಾಗಿ ದಹಿಸುವ ಮುನ್ನ, ಅವರ ಮೇಲೆ ತೀವ್ರ ಹಲ್ಲೆ ನಡೆಸಲಾಗಿತ್ತು ಎಂದು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹತ್ಯೆ ಪ್ರಕರಣದ ಬಗ್ಗೆ ಬುಧವಾರ ಕೋಲ್ಕತ್ತಾ ಹೈಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.