ಲಖನೌ: ಎರಡನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಈ ಬಾರಿ ಅಳೆದು ತೂಗಿ ಯೋಗಿ ಸಂಪುಟದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ನೀಡಿದೆ.
ಹಳಬರಿಗೆ ಕೋಕ್ ನೀಡಿರುವ ಯೋಗಿ ಆದಿತ್ಯನಾಥ್ ಈ ಬಾರಿ ತಮ್ಮ ಸಂಪುಟದಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದ್ದಾರೆ. 52 ಸಚಿವರ ಪೈಕಿ ಸಂಪುಟದಲ್ಲಿ 32 ಮಂದಿ ಹೊಸಬರಿಗೆ ಅವಕಾಶ ನೀಡಲಾಗಿದೆ. 2024ರ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಯೋಗಿ ಸಂಪುಟದಲ್ಲಿ ಬ್ರಾಹ್ಮಣರು, ಜಾಟರು, ಪರಿಶಿಷ್ಟ ಜಾತಿ ಸೇರಿದಂತೆ ಇತರೆ ಹಿಂದುಳಿದ ವರ್ಗಗಳಿಗೆ ಸಿಂಹಪಾಲು ಪ್ರಾಶಸ್ತ್ಯ ನೀಡಿದೆ.
ಅಲ್ಲದೆ, ಮುಸ್ಲಿಮರು ಮತ್ತು ಪಂಜಾಬಿ ಸಮುದಾಯದವರಿಗೂ ಸಚಿವ ಸ್ಥಾನ ನೀಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ಜಾತಿ ಮತ್ತು ಧರ್ಮಗಳ ಸಮೀಕರಣಕ್ಕೆ ಬಿಜೆಪಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಯಿಂದ ದೂರ ಸರಿದಿದ್ದ ಈ ಸಮುದಾಯಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ಮೂಲಕ ಓಲೈಕೆಗೆ ಬಿಜೆಪಿ ಮುಂದಾಗಿದೆ.
9 ಮಂದಿ ದಲಿತರು, 20 ಮಂದಿ ಹಿಂದುಳಿದ ವರ್ಗದವರು ಸೇರಿದಂತೆ ಮುಸ್ಲಿಂ ಹಾಗೂ ಪಂಜಾಬಿ ಸಮುದಾಯದ ತಲಾ ಒಬ್ಬರು ಯೋಗಿ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಕಳೆದ ಬಾರಿ ಯೋಗಿ ಸಂಪುಟದಲ್ಲಿ ಕಾನೂನು ಸಚಿವರಾಗಿದ್ದ ಬ್ರಾಹ್ಮಣ ಸಮುದಾಯದ ಬ್ರಜೇಶ್ ಪಾಠಕ್ ಅವರಿಗೆ ಈ ಬಾರಿ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿದೆ.