ಪಣಜಿ: ಎರಡನೇ ಅವಧಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಶ್ಯಾಮ್ ಪ್ರಸಾದ್ ಮುಖರ್ಜಿ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಅವರು ಪ್ರಮೋದ್ ಸಾವಂತ್‌ಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಬಿಜೆಪಿ ನಾಯಕರು ಸಾವಂತ್ ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿಯಾದರು.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜೊತೆಗೆ ವಿಶ್ವಜಿತ್ ಪಿ ರಾಣೆ, ರವಿ ನಾಯ್ಕ್, ನೀಲೇಶ್ ಕಬ್ರಾಲ್, ಸುಭಾಷ್ ಶಿರೋದ್ಕರ್, ರೋಹನ್ ಕೌಂಟೆ, ಗೋವಿಂದ ಗೌಟೆ ಪ್ರಮಾಣ ವಚನ ಸ್ವೀಕರಿಸಿದರು.
ಶ್ಯಾಮ್ ಪ್ರಸಾದ್ ಮುಖರ್ಜಿ ಮೈದಾನದಲ್ಲಿ ಭದ್ರತೆಗೆ 2 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳನ್ನು ಗಳಿಸಿತ್ತು. ಮೂವರು ಸ್ವತಂತ್ರ ಅಭ್ಯರ್ಥಿಗಳು ಮತ್ತು ಮಹಾರಾಷ್ಟ್ರವಾದಿ ಗೋಮಂತಕ್ ಪಕ್ಷದ ಇಬ್ಬರು ಶಾಸಕರ ಬೆಂಬಲ ಬಿಜೆಪಿಗೆ ಇದೆ.