ಚೆನ್ನೈ: ತಮಿಳುನಾಡಿನ ವಿರುದ್ಧುನಗರ ಜಿಲ್ಲೆಯಲ್ಲಿರುವ (Virudhunagar District) ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ (Firecracker Factory Blast) ಸಂಭವಿಸಿ 11 ಜನ ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿರುದ್ಧುನಗರ ಜಿಲ್ಲೆಯ ವೆಂಬಕೊಟ್ಟಾಯಿ (Vembakottai) ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ (ಫೆಬ್ರವರಿ 17) ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರೂ ಅಷ್ಟೊತ್ತಿಗಾಗಲೇ ಹಲವು ಜನ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ ಕಾರಣ ಏಳು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಾರ್ಖಾನೆಯ ಕೋಣೆಯೊಂದರಲ್ಲಿ ಕೆಮಿಕಲ್ ಮಿಶ್ರಣ ಮಾಡುವಾಗ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗತ್ತಿದೆ. ಗಾಯಗೊಂಡಿರುವ ಹಲವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
#WATCH | Explosion occurs in a firecracker manufacturing unit in Tamil Nadu's Virudhunagar; details awaited pic.twitter.com/cALcg6A9Ow
— ANI (@ANI) February 17, 2024
ಪಟಾಕಿ ಕಾರ್ಖಾನೆಯು ವಿಜಯ್ ಎಂಬುವವರಿಗೆ ಸೇರಿದ್ದು, ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಪಟಾಕಿ ಸ್ಫೋಟದ ತೀವ್ರತೆಗೆ ಕಾರ್ಖಾನೆ ಜತೆಗೆ ಅಕ್ಕಪಕ್ಕದ ನಾಲ್ಕು ಕಟ್ಟಡಗಳಿಗೂ ತೀವ್ರ ರೀತಿಯಲ್ಲಿ ಹಾನಿಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದಾಗ್ಯೂ, ದುರಂತದ ಕುರಿತು ಇದುವರೆಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.
ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 11 ಜನರ ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ
ಕೆಲ ದಿನಗಳ ಹಿಂದಷ್ಟೇ ಮಧ್ಯಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿ 11 ಜನ ಮೃತಪಟ್ಟಿದ್ದರು. ಮದ್ಯಪ್ರದೇಶದ ಹರ್ದಾ ಪಟ್ಟಣದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭೀಕರ ದುರಂತ ಸಂಭವಿಸಿತ್ತು. ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾರ್ಖಾನೆಯಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದ್ದು, 11 ಜನ ಮೃತಪಟ್ಟಿದ್ದರು. 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಗೊಂಡವರಲ್ಲಿಯೇ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿತ್ತು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ