Site icon Vistara News

NEET: ಕರ್ನಾಟಕ ಬಳಿಕ ಪಶ್ಚಿಮ ಬಂಗಾಳದಲ್ಲೂ ನೀಟ್‌ ಪರೀಕ್ಷೆ ವಿರುದ್ಧ ನಿರ್ಣಯ; ಹೆಚ್ಚಾಯ್ತು ಆಕ್ರೋಶ

NEET

After Karnataka, West Bengal Assembly Passes Resolution Against NEET

ಕೋಲ್ಕೊತಾ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET) ಅಕ್ರಮ ನಡೆದಿರುವ ಪ್ರಕರಣವು ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಇದರ ಮಧ್ಯೆಯೇ, ನೀಟ್‌ ವಿರುದ್ಧ ಹಲವು ರಾಜ್ಯ ಸರ್ಕಾರಗಳು ನಿರ್ಣಯ ಮಂಡಿಸುತ್ತಿವೆ. ಕರ್ನಾಟಕದಲ್ಲಿ (Karnataka) ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ, ಪಶ್ಚಿಮ ಬಂಗಾಳ (West Bengal) ವಿಧಾನಸಭೆಯಲ್ಲಿ ಟಿಎಂಸಿ ಸರ್ಕಾರವು ನೀಟ್‌ ವಿರುದ್ಧ ನಿರ್ಣಯ (Resolution Against NEET) ಮಂಡಿಸಿದೆ.

“ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನೀಟ್‌ ಪರೀಕ್ಷೆಯನ್ನು ಆಯೋಜಿಸುವಲ್ಲಿ ವಿಫಲವಾಗಿದೆ. ಇದರಿಂದಾಗಿ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಪ್ರಕರಣಗಳು ಢಾಳಾಗಿವೆ. ಇಂತಹ ಪ್ರಕರಣಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಹಾಗಾಗಿ, ರಾಜ್ಯದಲ್ಲಿ ನೀಟ್‌ ಪರೀಕ್ಷೆಯನ್ನು ರದ್ದುಗೊಳಿಸಿ, ಹೊಸ ಮಾದರಿಯ ಪರೀಕ್ಷೆಯನ್ನು ನಡೆಸಲಾಗುತ್ತದೆ” ಎಂಬುದಾಗಿ ಟಿಎಂಸಿ ಸರ್ಕಾರ ಮಂಡಿಸಿದ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ಕರ್ನಾಟಕಕ್ಕೂ ಮೊದಲು ತಮಿಳುನಾಡು ವಿಧಾನಸಭೆಯಲ್ಲಿ ನೀಟ್‌ ವಿರುದ್ಧ ನಿರ್ಣಯ ಮಂಡಿಸಲಾಗಿದೆ.

NEET-UG 2024 result

ಏನಿದು ನೀಟ್‌ ಅಕ್ರಮ ಕೇಸ್?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಮತ್ತೊಂದೆಡೆ, ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕೇಂದ್ರ ಸರ್ಕಾರ ಹಾಗೂ ಎನ್‌ಟಿಎ ವಿರುದ್ಧ ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಆದರೆ, 23 ಲಕ್ಷ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಾಗೂ ಅಕ್ರಮದ ತೀವ್ರತೆಯನ್ನು ಪರಿಶೀಲಿಸಿದ ನ್ಯಾಯಾಲಯವು, ನೀಟ್‌ ಮರುಪರೀಕ್ಷೆ ಬೇಡ ಎಂದು ಮಹತ್ವದ ಆದೇಶ ಹೊರಡಿಸಿದೆ.

ಇದನ್ನೂ ಓದಿ: NEET UG 2024: ನೀಟ್‌ ಮರು ಪರೀಕ್ಷೆ ನಡೆಸುವುದಿಲ್ಲ; ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು

Exit mobile version